ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.7: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
5ರಿಂದ 18 ವರ್ಷದೊಳಗಿನ ಮಕ್ಕಳು ಆ.31ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ 8 ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿ ಮಕ್ಕಳಿಗೆ 10 ಸಾವಿರ ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು. ಈ ಹಿಂದಿನ ವಷರ್ಗಳಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿಲ್ಲ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಮಕ್ಕಳು ಅಪ್ರತಿಮ ಸಾಧನೆ ಮಾಡಿದ ಬಗ್ಗೆ ಪೂರಕ ದಾಖಲೆಗಳನ್ನು ಒದಗಿಸಬೇಕು.
ಹೆಚ್ಚಿನ ಮಾಹಿತಿ ಅಥವಾ ಅರ್ಜಿ ನಮೂನೆಯನ್ನು ನಗರದ ಬಿಜೈನಲ್ಲಿರುವ ಜಿಲ್ಲಾ ಸ್ತ್ರೀಶಕ್ತಿ ಭವನದ 2ನೇ ಮಹಡಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (ದೂ.ಸಂ:0824-2451254) ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.