ವೆನ್‌ಲಾಕ್ ಆಸ್ಪತ್ರೆಯ ಒಪಿಡಿ ಕಟ್ಟಡ ನಿರ್ಮಾಣ: 35 ಕೋಟಿ ರೂ.ಮೊತ್ತದ ಕಾಮಗಾರಿಗೆ ಸರಕಾರದ ಆಡಳಿತಾತ್ಮಕ ಅನುಮೋದನೆ
ಮಂಗಳೂರು, ಜ.20: ನಗರದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಕಟ್ಟಡದ 35 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ 70 ಕೋಟಿ ರೂ. ವೆಚ್ಚದಲ್ಲಿ ಒಪಿಡಿ ಬ್ಲಾಕ್ ನಿರ್ಮಾಣದ ಮೊದಲ ಹಂತದ ಕಾಮಗಾರಿಗೆ 35 ಕೋಟಿ ರೂ. ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಯೊಂದಿಗೆ ಟೆಂಡರ್ ಆಹ್ವಾನಿಸಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಭಾಕರ ಟಿ. ಜ.19ರಂದು ಹೊಡರಡಿಸಿರುವ ಆದೇಶ ತಿಳಿಸಿದೆ.
ರಾಜ್ಯ ಸರಕಾರ 2025-26ನೇ ಸಾಲಿನ ಆಯವ್ಯಯ ಕಂಡಿಕೆ-138(3) ರಲ್ಲಿ ಮಾಲೂರು, ಮಾಗಡಿ, ಕುಶಾಲನಗರ, ಕೊರಟೆಗೆರೆ,ಜಗಳೂರು ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳು, ದಾವಣಗೆರೆ ಜಿಲ್ಲಾಸ್ಪತ್ರೆ ಮತ್ತು ಮಂಗಳೂರಿನ ವೆನ್‌ಲಾಕ್ ಜಿಲ್ಲಾಸ್ಪತ್ರೆಯನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡುವುದಾಗಿ ಸರಕಾರ ಬಜೆಟ್‌ನಲ್ಲಿ ಘೋಷಿಸಿತ್ತು.