×
Ad

ಎಂಡೋ ಸಲ್ಫಾನ್ ಸಂತ್ರಸ್ತರ ಸಮಸ್ಯೆ ಪರಿಹರಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ

Update: 2023-11-24 20:50 IST

ಮಂಗಳೂರು : ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗುರುವಾರ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಒ, ಗ್ರಾಮ ಕರಣಿಕರು ಅವರನ್ನು ಒಳಗೊಂಡ ತಂಡ ರಚಿಸಬೇಕು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6,314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹೇಳಿದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಆರೋಗ್ಯ ಇಲಾಖೆಯ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News