×
Ad

ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಲು ಪ್ರಯತ್ನ: ಟಿ.ಎಂ.ಶಹೀದ್ ತೆಕ್ಕಿಲ್

Update: 2025-10-07 15:59 IST

ಮಂಗಳೂರು : ಕಾರ್ಮಿಕರಿಗೆ ಕನಿಷ್ಠ ವೇತನ ನೀಡದ ಯಾವುದೇ ಸಂಸ್ಥೆ, ಕಂಪೆನಿಗಳ ಮಾಲಕರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳಲಿದೆ. ರಾಜ್ಯದ ಎಲ್ಲ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಲು ಕನಿಷ್ಠ ವೇತನ ಸಲಹಾ ಮಂಡಳಿ ಪ್ರಯತ್ನಿಸಲಿದೆ ಎಂದು ಕಾರ್ಮಿಕ ಇಲಾಖೆಯ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದರು.

ಐಎಎಸ್ ಅಧಿಕಾರಿಗಳ ಬದಲಾಗಿ ರಾಜ್ಯ ಸರಕಾರ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷನನ್ನಾಗಿ ಕಾರ್ಮಿಕರ ಪರವಾಗಿ ಕೆಲಸ ಮಾಡಿರುವ ನನ್ನನ್ನು ನೇಮಿಸಿದೆ. ವಿವಿಧ ವರ್ಗಗಳ 9 ಮಂದಿ ಸದಸ್ಯರು ಇರಲಿದ್ದಾರೆ. ಎಲ್ಲ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂಬಂಧ ಕಾಲಕಾಲಕ್ಕೆ ಮಂಡಳಿಯು ಸರಕಾರಕ್ಕೆ ವರದಿ ನೀಡುವ ಜವಾಬ್ದಾರಿ ಹೊಂದಿದೆ. ಈಗಾಗಲೇ ಸೆಪ್ಟೆಂಬರ್‌ನಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಅದನ್ನು ಪುರಸ್ಕರಿಸುವ ಅಥವಾ ತಿರಸ್ಕಾರ ಮಾಡುವ ಅಧಿಕಾರ ಸರಕಾರಕ್ಕಿದೆ. ವರದಿ ತಿರಸ್ಕಾರಗೊಂಡಲ್ಲಿ ಮತ್ತೊಮ್ಮೆ ಕಾರ್ಮಿಕರ ಪರವಾಗಿ ಕನಿಷ್ಠ ವೇತನ ನಿಗದಿಪಡಿಸಿ ಸರಕಾರಕ್ಕೆ ಸಲಹಾ ವರದಿ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ರಾಜ್ಯದಲ್ಲಿ 81 ವಿಧದ ಒಟ್ಟು 2 ಕೋಟಿ ಕಾರ್ಮಿಕರಿದ್ದಾರೆ. ಪ್ರಸ್ತುತ 14 ಸಾವಿರದಿಂದ 19ಸಾವಿರದವರೆಗೆ ಕನಿಷ್ಠ ವೇತನ ನಿಗದಿಯಾಗಿದೆ. ಗ್ರಾಹಕ ಬೆಲೆ ಸೂಚ್ಯಂಕದ ಆಧಾರದಲ್ಲಿ ಕಾಲಕಾಲಕ್ಕೆ ಕನಿಷ್ಠ ವೇತನ ನಿಗದಿಪಡಿಸಲು ಮಂಡಳಿ ಸರಕಾರಕ್ಕೆ ಶಿಫಾರಸು ಮಾಡಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಲು ಪ್ರಯತ್ನಿಸಲಾಗುವುದು. ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವಲ್ಲಿ ಅನ್ಯಾಯವಾಗಿದ್ದರೆ ಪರಿಶೀಲಿಸಲಾಗುವುದು ಎಂದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅ.10ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಿದ್ದಾರೆ ಎಂದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮುಸ್ತಾಫಾ, ಮುಖಂಡರಾದ ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ನಿತ್ಯಾನಂದ ಶೆಟ್ಟಿ, ಲಾರೆನ್ಸ್ ಡಿಸೋಜ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News