ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ ದರ್ಶನ್
ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರಾ.ಹೆ.ಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾ.ಹೆ. ಪ್ರಾಧಿಕಾರಕ್ಕೆ ಸೂಚಿಸ ಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದರು.
ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಕಾಲೇಜುಗಳ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್‌ಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದ ಜಿಲ್ಲಾಧಿಕಾರಿ ನಗರದ ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ ಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿದೆ. ಈ ಸಮಸ್ಯೆಗೆ ಪರಿಹರಿ ಕಲ್ಪಿಸಬೇಕು. ಕೆಲವು ಉದ್ಯಮ ಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ನೇಮಿಸಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂತೆಗೆಯುವಿಕೆ ಚೀಟಿಯನ್ನೂ ಕನ್ನಡದಲ್ಲಿ ಒದಗಿಸಬೇಕು. ಗ್ರಾಮೀಣ ಪ್ರದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿಯು ಕಾರ್ಯನಿರ್ವಹಿಸುತ್ತಿದೆ. ಇದರಿಂದ ಸ್ಥಳೀಯರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಯ ಗಮನ ಸೆಳೆದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಮಾತನಾಡಿ ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಲು ಆಗ್ರಹಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ.ಸಂತೋಷ್ ಕುಮಾರ್ ಜಿ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಮತ್ತಿತ ರರು ಉಪಸ್ಥಿತರಿದ್ದರು.