ಮಂಗಳೂರು | ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ವಶಕ್ಕೆ
ಬಂಧಿತ ಆರೋಪಿಗಳು
ಮಂಗಳೂರು: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಮತ್ತು ಗೂಡಿನ ಬಳಿ ನಿವಾಸಿ ಮುಹಮ್ಮದ್ ಅಸೀಫ್ (35) ಬಂಧಿತ ಆರೋಪಿಗಳು.
ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಟಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಕಾರು ಮತ್ತು ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರನ್ನು ಹಿಡಿದು ಪೊಲೀಸರು ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆೆ. ಒಟ್ಟು 810 ಗ್ರಾಂ ಗಾಂಜಾವನ್ನು ವಾಹನಗಳ ಸಮೇತ ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.