×
Ad

ಮಂಗಳೂರು | ಅಕ್ರಮ ಮಾನವ ಕಳ್ಳ ಸಾಗಣೆ ನಿವಾರಣೆಗೆ ಜಾಗೃತಿ ಅಗತ್ಯ: ಜೈಬುನ್ನಿಸಾ

Update: 2025-12-05 18:38 IST

ಮಂಗಳೂರು,ಡಿ.5: ಅಕ್ರಮ ಮಾನವ ಕಳ್ಳ ಸಾಗಣೆಯು ಸಾಮಾಜಿಕ ಪಿಡುಗಾಗಿದೆ. ಮಕ್ಕಳು ಮತ್ತು ಮಹಿಳೆಯರು ಈ ಜಾಲಕ್ಕೆ ಸಿಲುಕುತ್ತಿರುವುದು ವಿಷಾದನೀಯ. ಈ ನಿಟ್ಟಿನಲ್ಲಿ ಎಷ್ಟೇ ಕಾನೂನು ರೂಪಿಸಿದರೂ ಕೂಡ ಸಾರ್ವಜನಿಕರು ಜಾಗೃತರಾಗಬೇಕು. ಇಲ್ಲದಿದ್ದರೆ ಇಂತಹವುಗಳಿಗೆ ಕಡಿವಾಣ ಹಾಕಲು ಸುಲಭವಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕ ತಡೆ ಕುರಿತು ಮಂಗಳೂರು ತಾಪಂ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ರೋಹಿತ್ ಸಿ.ಜೆ. ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಶ್ಮಿ ಕೆ.ಎಂ, ಪಡಿ ಸಂಸ್ಥೆಯ ನಿರ್ದೇಶಕ ರೆನ್ನಿ ಡಿಸೋಜ, ಮಂಗಳೂರು ತಾಪಂ ಇಒ ಮಹೇಶ್ ಹೊಳ್ಳ ಮತ್ತಿತರರು ಭಾಗವಹಿಸಿದ್ದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಗಿ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ. ವಂದಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News