×
Ad

ಮಂಗಳೂರು | ಉಡುಪಿಗೆ ಪ್ರಧಾನಿ ಆಗಮನ ಹಿನ್ನೆಲೆ: ಅಗತ್ಯ ಸಿದ್ಧತೆಗಳ ಪರಿಶೀಲನೆ

Update: 2025-11-25 19:09 IST

ಮಂಗಳೂರು,ನ.25: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು.

ಹಿರಿಯ ಎಸ್ಪಿಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಹಿತ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿಐಎಸ್ಎಫ್, ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನ.28ರಂದು ಬೆಳಗ್ಗೆ 8:15ಕ್ಕೆ ಹೊಸದಿಲ್ಲಿಯಿಂದ ಹೊರಡುವ ಪ್ರಧಾನಮಂತ್ರಿ ಪೂ.11:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ.

ಉಡುಪಿಯ ಕಾರ್ಯಕ್ರಮದ ಬಳಿಕ ಅಪರಾಹ್ನ 2:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಗೋವಾಕ್ಕೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ರೀತಿಯ ಅತ್ಯುನ್ನತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಆ್ಯಂಬುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ವಾಹನ ಸೇರಿದಂತೆ ಸೌಲಭ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಎಸ್ಪಿಜಿ ಅಧಿಕಾರಿಗಳು ಸೂಚಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ಹೋಗುವ ರಾ.ಹೆ.ಯನ್ನು ಸುಸ್ಥಿತಿಯಲ್ಲಿ ಇಡಬೇಕು. ಅಗತ್ಯ ಬಿದ್ದರೆ ಬಳಸಲು ಸರ್ಕ್ಯೂಟ್ ಹೌಸ್ ಹಾಗೂ ಉನ್ನತ ಆಸ್ಪತ್ರೆಯನ್ನು ಸನ್ನದ್ದವಾಗಿಡಲು ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಕಂದಾಯ ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News