ಮಂಗಳೂರು | ಮೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯಕ್ಕೆ ಶಾಸಕ ಕಾಮತ್ ಆಕ್ಷೇಪ
ವೇದವ್ಯಾಸ ಕಾಮತ್
ಮಂಗಳೂರು, ಡಿ.6: ಮೆಸ್ಕಾಂ ವ್ಯಾಪ್ತಿಯಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಮಾರ್ಟ್ ಮೀಟರ್ ಪಡೆಯಲು ಸಾಕಷ್ಟು ಸಮಯಾವಕಾಶ ನೀಡದಿರುವುದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿ ಬಂದಿದೆ. ನೂತನ ಸ್ಮಾರ್ಟ್ ಮೀಟರ್ ಅಳವಡಿಸಲು ಈಗಿರುವ ಮೀಟರ್ ಬೋರ್ಡ್ಗಿಂತ ಹೆಚ್ಚಿನ ಗಾತ್ರದ ಬೋರ್ಡ್ ಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಸ್ಥಳಾವಕಾಶ ಇಲ್ಲದಿದ್ದಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಿರುವಾಗ ಕಡಿಮೆ ಸಮಯಾವಕಾಶ ನೀಡಿ ಕಡ್ಡಾಯ ಮಾಡಿದರೆ ಗ್ರಾಹಕರು ತೊಂದರೆ ಅನುಭವಿಸಬೇಕಾಗುತ್ತದೆ. ಬಡವರಿಗಂತೂ ಈ ನಿಯಮದಿಂದ ದುಬಾರಿ ವೆಚ್ಚವಾಗಲಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪ್ರಮುಖರು ತಿಳಿಸಿದ್ದಾರೆ.
ಜನಸಾಮಾನ್ಯರ ಹಿತದೃಷ್ಟಿಯಿಂದ ಈಗಾಗಲೇ ಸಂಬಂಧಪಟ್ಟವರಿಗೆ ಸಂಘದ ಪ್ರಮುಖರು ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಸಕ ಕಾಮತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.