×
Ad

ಮಂಗಳೂರು| ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಜೈಲುಶಿಕ್ಷೆ, ದಂಡ

Update: 2025-01-18 19:40 IST

ಮಂಗಳೂರು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಅರ್ಕುಳ ಗ್ರಾಮದ ಮೇರಮಜಲು ನಿವಾಸಿ ಧರ್ಮಣ ಪೂಜಾರಿ (40) ಶಿಕ್ಷೆಗೊಳಗಾದ ಆರೋಪಿ.

2024 ಜು.8ರಂದು 6 ವರ್ಷದ ಬಾಲಕಿಯು ಚಾಕಲೇಟ್ ತರಲೆಂದು ಅಂಗಡಿಗೆ ಹೋಗಿದ್ದ ವೇಳೆ ಬಂಟ್ವಾಳ ತಾಲೂಕಿನ ಮುಡಾ ಗ್ರಾಮದ ತಲಪಾಡಿಯ ಬಾಡಿಗೆ ಕೊಠಡಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಧರ್ಮಣ ಪೂಜಾರಿ ಪುಸಲಾಯಿಸಿ ತನ್ನ ಅಂಗಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ.

ಈ ಬಗ್ಗೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾ ರೋಪಣೆ ಪಟ್ಟಿ ಸಲ್ಲಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆ. ಅಭಿಯೋಜನೆ ಪರ 9 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿದೆ. 19 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಕರಣದ ಸಾಕ್ಷ್ಯ ದಾಖಲೆಗಳು, ಪೂರಕ ಸಾಕ್ಷ್ಯ ಹಾಗೂ ವಾದ ಪ್ರತಿವಾದ ಆಲಿಸಿ ಜ.17ರಂದು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್. ತೀರ್ಪು ಪ್ರಕಟಿಸಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕಲಂ 10 ಪೋಕ್ಸೊ ಕಾಯ್ದೆಯಂತೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 396ರ ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ.

ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News