ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿಗೆ ಮೇಯರ್ ಸೂಚನೆ
ಮಂಗಳೂರು, ಸೆ. 15: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸಕ್ತ ಡೆಂಗಿ ಪ್ರಕರಣಗಳು ಜಾಸ್ತಿಯಗುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸೂಚನೆ ನೀಡಿದ್ದಾರೆ.
ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಎಂಪಿಡಬ್ಲ್ಯು ಕಾರ್ಯಕರ್ತರು ಮನೆ ಭೇಟಿ ನಡೆಸುತ್ತಿರುವ ಬಗ್ಗೆ ಮೇಲ್ವಿಚಾರಣೆ ನಡೆಸುವಂತೆ ತಿಳಿಸಿದ ಅವರು, ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಸುತ್ತಮುತ್ತ ಶುಚಿತ್ವವನ್ನು ಕಾಪಾಡಿ ಎಲ್ಲೂ ನೀರು ನಿಲ್ಲದಂತೆ ಕ್ರಮ ವಹಿಸಲು ಮಾಹಿತಿ ಒದಗಿಸುವಂತೆ ತಿಳಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಿಗೆ ಬಾಕಿ ವಸೂಲಾತಿಯ ಕುರಿತು ಪರಿಶೀಲನೆ ನಡೆಸಲಾಯಿತು. ಅಲ್ಲದೇ ಕಸ ವಿಲೇವಾರಿಯನ್ನು ಸಮಗ್ರವಾಗಿ ನಿರ್ವಹಿಸುವಂತೆ ಮೇಯರ್ ನಿರ್ದೇಶನ ನೀಡಿದರು.
ಸದಸ್ಯರಾದ ವರುಣ್ ಚೌಟ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಕುರಿತು ಎಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಸಭೆಯಲ್ಲಿ ಉಪಮೇಯರ್ ಸುನೀತಾ, ಮಹಾನಗರ ಪಾಲಿಕೆಯ ಸದಸ್ಯರಾದ ಲೋಹಿತ್ ಅಮೀನ್, ವರುಣ್ ಚೌಟ, ಗಣೇಶ್, ಭಾಸ್ಕರ್ ಕೆ., ದಿವಾಕರ್, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ, ವಲಯ ಆಯುಕ್ತರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಮತ್ತು ಆರೋಗ್ಯ ಮೇಲ್ವಿಚಾರಕರು ಉಪಸ್ಥಿತರಿದ್ದರು.