ಮೂಡುಬಿದಿರೆ | ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ನಡೆಯಿತು.
ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಜಿಲ್ಲಾ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪತ್ರಕರ್ತರು ತಮ್ಮ ಮಾಧ್ಯಮಗಳಲ್ಲಿ ವರದಿಗಾರಿಕೆ ನಡೆಸುವುದರೊಂದಿಗೆ ಸಂಘಟಿತರಾಗಿ ತಮ್ಮ ಏಳಿಗೆಗೆ ಬದ್ಧರಾಗಬೇಕು ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಸಂಘದ ಕಾರ್ಯ ಚಟುವಟಿಕೆಗಳಿಗೆ ಜಿಲ್ಲಾ ಸಂಘ ನಿರಂತರ ಬೆಂಬಲ ನೀಡುವುದಾಗಿ ತಿಳಿಸಿ ಶುಭ ಹಾರೈಸಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ನವೀನ್ ಸಾಲ್ಯಾನ್ ಸಂಘದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸಭೆಯಲ್ಲಿ ಭಾಗವಹಿಸಿ ಹಾರೈಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೈಸನ್ ತಾಕೋಡೆ ಧನ್ಯವಾದವಿತ್ತರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ಪ್ರಸನ್ನ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.