×
Ad

ರಾಜೇಂದ್ರ ಕುಮಾರ್‌ಗೆ ‘ಕರುನಾಡ ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

Update: 2023-11-27 22:36 IST

ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ , ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ ಕರುನಾಡ ಕರ್ನಾಟಕ ರತ್ನ ’ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸೋಮವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಹಕಾರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ ಅವರಿಗೆ ಕರುನಾಡ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ನೀಡಿ ಗೌರವಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಳೆದ 29  ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸೇವೆಗೈಯುತ್ತಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿ ‘ ಜನಸ್ನೇಹಿ’ ಬ್ಯಾಂಕ್’ ಆಗಿ ರೂಪಿಸಿದ್ದಾರೆ . ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿದ ಇವರು ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟವರು. ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಶ್ರೇಯಸ್ಸು ರಾಜೇಂದ್ರ ಕುಮಾರ್ ಅವರದ್ದು. ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕ್ ಸೇವೆಯನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದಾಗಿದೆ.

ಸಹಕಾರ, ಸಾಮಾಜಿಕ, ಬ್ಯಾಂಕಿಂಗ್, ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಎರಡನೇ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಇವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವಧರ್ಮಿಯರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರು ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿ ಸಲ್ಲಿಸಿದ ಅನುಪಮ ಸಮಾಜ ಸೇವೆಗೆ ಇದೀಗ ಕರುನಾಡ ಕರ್ನಾಟಕ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಿಟ್ಟೆ ಸಂತೋಷ ಹೆಗ್ಡೆ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಜಿ.ಆರ್.ವಿಶ್ವನಾಥ್, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಡಾ. ಎಸ್. ಚಂದ್ರಶೇಖರ ಶೆಟ್ಟಿ, ವಿಶ್ರಾಂತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಚಾರ ಹಾಗೂ ದಿ . ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇದರ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News