×
Ad

ಲೋಕಸಭಾ ಚುನಾವಣೆಗೆ ಫೆಬ್ರವರಿ ಅಂತ್ಯಕ್ಕೆ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಲೀಮ್ ಅಹ್ಮದ್

Update: 2024-02-11 21:48 IST

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಐದು ಮಂದಿಯ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ. ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ. ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.

ಫೆ. 17ರಂದು ಸಮಾವೇಶ: ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

ಸಮಾವೇಶದ ಬಗ್ಗೆ ಮಾಹಿತಿ ನೀಡಿದ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜಿವಾಲ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂಸದರು, ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

ಸಮಾವೇಶದ ಪೂರ್ವ ತಯಾರಿಗಾಗಿ ಕೆಪಿಸಿಸಿ ಅಧ್ಯಕ್ಷರು 7 ಸಮಿತಿ ರಚನೆ ಮಾಡಿ ಜವಾಬ್ದಾರಿ ಹಂಚಿಕೊಟ್ಟಿದ್ದಾರೆ. ಸಮಿತಿಯಲ್ಲಿ ನೂರಕ್ಕೂ ಅಧಿಕ ಮಂದಿ ಇದ್ದಾರೆ . ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆ ತಯಾರಿಗೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರಕಾರದ ವೈಫಲ್ಯ ಮತ್ತು ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಜನಪರ ಗ್ಯಾರೆಂಟಿ ಯೋಜನೆಗಳನ್ನು ಜನರ ಬಳಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಸಚಿವ ನಿರ್ಮಲಾ ಸೀತಾರಾಮನ ರಾಜೀನಾಮೆ ನೀಡಲಿ: ಕೇಂದ್ರ ಸರಕಾರ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯ ಮಾಡಿದೆ. ನಮಗೆ ಬೇಕಾದ ಹಣದ ಪಾಲನ್ನು ನೀಡುತ್ತಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಅವರು ರಾಜ್ಯದ ಪರ ಧ್ವನಿ ಎತ್ತುತ್ತಿಲ, 4 ಮಂದಿ ಕೇಂದ್ರ ಸಚಿವರು ಇದ್ದರೂ ಪ್ರಯೋಜನ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಅವರಲ್ಲಿ ಕೇಳಿದರೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಯಾಕೆ ಹೀಗೆ? ನಿರ್ಮಲಾ ಸೀತಾರಾಮನ್‌ಗೆ ರಾಜ್ಯದ ಪರ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಎಂಟು ತಿಂಗಳಲ್ಲಿ ನುಡಿದಂತೆ ನಡೆದಿದೆ. ಆದರೆ 10 ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏನನ್ನು ಮಾಡಿಲ್ಲ. ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆ ಮಾಡಿದ್ದಾರೆ. ಆದರೆ ಅದನ್ನು ಅನುಷ್ಠಾನಗೊಳಿಸಿದೆ ಸಬ್‌ಕಾ ವಿನಾಸ್ ಮಾಡಿದ್ದಾರೆ ಎಂದರು.

ಅವಕಾಶವಾದಿ ರಾಜಕಾರಣ: ಜಾತ್ಯತೀತ ಎಂದು ಹೇಳುತ್ತಿದ್ದ ಜೆಡಿಎಸ್ ಬಿಜೆಪಿ ಜೊತೆ ಕೈಜೋಡಿಸಿದೆ. ಜೀವನವಿಡೀ ಜಾತ್ಯತೀತ ವಿಚಾರಗಳ ಬಗ್ಗೆ ಮಾತನಾಡುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ದೇವೇಗೌಡ ಮಗನ ರಾಜಕೀಯ ಭವಿಷ್ಯಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಇದು ಅವಕಾಶವಾದಿ ಮತ್ತು ಅಪವಿತ್ರ ಮೈತ್ರಿ ಎಂದು ಬಣ್ಣಿಸಿದರು.

ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಮತ್ತು ಡಾ.ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ವಿಪ ಸದಸ್ಯ ಐವನ್ ಡಿ ಸೋಜ, ಪಕ್ಷದ ಧುರೀಣರಾದ ಸುರೇಶ್ ಬಳ್ಳಾಲ್, ಮಮತಾ ಗಟ್ಟಿ, ಕೃಪಾ ಆಳ್ವ, ಮಿಥುನ್ ರೈ, ಶಶಿಧರ್ ಹೆಗ್ಡೆ, ಪಿವಿ ಮೋಹನ್ ,ವಿಶ್ವಾಸ್‌ದಾಸ್ , ಮನೋಹರ್ ರಾಜೀವ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News