×
Ad

ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯ :ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ

Update: 2024-06-26 20:22 IST

ಮಂಗಳೂರು: ಮಾದಕ ವ್ಯಸನವನ್ನುತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರಅತ್ಯಂತ ಮುಖ್ಯವಾದದ್ದು, ವಿದ್ಯಾರ್ಥಿಗಳಲ್ಲಿ ಆಗು ವಂತಹ ಬದಲಾವಣೆ, ನಡವಳಿಕೆ, ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ಹೆಚ್ಚಾಗಿ ಶಿಕ್ಷಕರಿಗೆ ತಿಳಿದಿರುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗದಂತೆ ಶಿಕ್ಷಕರು ಅವರೊಂದಿಗೆ ಸಮಾಲೋಚನಗಳನ್ನು ನಡೆಸಿ ಅವರಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ.ಅವರು ಹೇಳಿದ್ದಾರೆ.

ಅವರು ಬುಧವಾರ ಜಿಲ್ಲಾ ಪಂಚಾಯತ್, ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರ್‌ರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಗಳಲ್ಲಿ ಯಾವುದಾದರೂ ಒಬ್ಬ ವಿದ್ಯಾರ್ಥಿಯು ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ವಿಷಯವನ್ನು ಸಂಬಂಧಪಟ್ಟ ಇಲಾಖೆಗೆ ಅಧಿಕಾರಿಗಳಿಗೆ ತಿಳಿಸುವ ಕೆಲಸವಾಗಬೇಕು, ಅಲ್ಲದೆ ಶಾಲೆಯ ಘನತೆ,ಗೌರವದ ಪ್ರಶ್ನೆ ಎಂದು ಇಂತಹ ಗಂಭೀರ ವಿಚಾರವನ್ನು ಮುಚ್ಚಿ ಹಾಕಿದ್ದಲ್ಲಿ ಮುಂದಿನ ದಿನ ಪರಿಣಾಮವು ಇನ್ನಷ್ಟು ಗಂಭೀರವಾಗಬಹುದು ಎಂದು ಹೇಳಿದರು.

ಪೋಷಕರು ಕೂಡ ಮಕ್ಕಳ ಚಲನ ವಲನಗಳ ಬಗ್ಗೆ ಗಮನ ಹರಿಸಬೇಕು,ಇತ್ತೀಚೆಗೆ ಮಾದಕ ವ್ಯಸನಿಗಳಾಗಿ ಹದಿಹರೆಯ ದವರು ಮಾತ್ರವಲ್ಲ ಸಣ್ಣ ಮಕ್ಕಳು ಕೂಡ ವ್ಯಸನಕ್ಕೆ ದಾಸರಾಗುತ್ತಿದ್ದಾರೆ, ಹೆಚ್ಚಾಗಿ ವೈದ್ಯಕೀಯ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾವು ಅತೀ ಹೆಚ್ಚು ಮಾದಕ ವ್ಯಸನಕ್ಕೆ ಸಂಬಂಧಪಟ್ಟ ದೂರುಗಳನ್ನು ಕೇಳುತ್ತೇವೆ. ಆದ್ದರಿಂದ ಮಾದಕ ವ್ಯಸನದ ಸಂಪೂರ್ಣ ನಿರ್ಮೂಲನೆ ಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆಯವರ ಕೆಲಸ ಶ್ಲಾಘನೀಯ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಅಲ್ವಿನ್ ಅಂದ್ರದೆ ಅವರು ಮಾತನಾಡಿ ಈಗಾಗಲೇ ಶಾಲಾ ಮಟ್ಟದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ,ಆದರೆ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಕ್ರಿಯಾಯೋಜನೆಯನ್ನು ಕೈಗೊಳ್ಳುವ ಮುಖಾಂತರ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಮಾದಕ ವ್ಯಸನಕ್ಕೆ ಸಂಬಂಧಪಟ್ಟ ವಿಷಯಗಳೊಂದಿಗೆ ವಿಭಿನ್ನ ರೀತಿಯ ಚಟುವಟಿಕೆಗಳನ್ನು, ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ಪೊಲೀಸ್ ಆಯುಕ್ತ ಬಿ.ಪಿ ದಿನೇಶ್ ಕುಮಾರ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಬಳಿಕ ಮಾತನಾಡಿದ ಅವರು ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಆಂಟಿಡ್ರಗ್ ಸೆಲ್ ಘಟಕವನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಮಾದಕವ್ಯಸನದ ಸೇವನೆ ಕೇವಲ ಒಬ್ಬ ವ್ಯಕ್ತಿಯ ಮೇಲೆ ಮಾತ್ರ ಪರಿಣಾಮ ಬೀರದೆ ಆತನ ಕುಟುಂಬ, ಸಮಾಜದ ಮೇಲೂ ಪರಿಣಾಮ ಬೀರುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಡಾ.ಎಚ್.ಆರ್‌ತಿಮ್ಮಯ್ಯ, ವೆನಲಾಕ್ ಜಿಲ್ಲಾ ಸ್ಪತ್ರೆ,ಜಿಲ್ಲಾ ಶಸ್ತ್ರ ಚಿಕಿತ್ಸಕರಾ ಡಾ.ಜೆಸಿಂತಾ ಡಿಸೋಜ, ಲಿಂಕ್ ವ್ಯಸನ ಮುಕ್ತ ಮತ್ತು ಪುನರ್ವಸತಿ ಕೇಂದ್ರ ಇದರ ಆಡಳಿತಾಧಿಕಾರಿ ಲಿಡಿಯಾ ಲೋಬೊ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಎಸ್‌ಪಟೆಗಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News