ಮಂಗಳೂರು: ಕೇಂದ್ರ ಸರಕಾರದ ಧೋರಣೆಯ ವಿರುದ್ಧ ಕಾಂಗ್ರೆಸ್‌ನಿಂದ ಚೊಂಬು ಹಿಡಿದು ಪ್ರತಿಭಟನೆ
ಮಂಗಳೂರು: ಎನ್‌ಡಿಎ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಮಲತಾಯಿ ಧೋರಣೆ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಲಾಲ್ ಭಾಗ್‌ನ ಮಂಗಳೂರು ನಗರ ಪಾಲಿಕೆ ಕಚೇರಿ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಚೆಂಬು ಹಿಡಿದು ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ ರಾಜ್ಯಕ್ಕೆ ಮತ್ತೊಮ್ಮೆ ಚೊಂಬು ನೀಡಿದೆ. ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಹಣಕಾಸು ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕಕ್ಕೆ ಪ್ರತಿ ಬಾರಿಯೂ ಅನ್ಯಾಯ ಮಾಡುತ್ತಿದ್ದಾರೆ. ಅವರಿಗೆ ಹಣಕಾಸು ಸಚಿವರಾಗಿ ಮುಂದುವರಿಯಲು ಅರ್ಹತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕೇಂದ್ರ ಸರಕಾರ ರಾಜ್ಯವನ್ನು ಕಡೆಗಣಿ ಸುತ್ತಿದೆ. ಈ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ, ಎಂ.ಎಸ್. ಮೊಹಮ್ಮದ್ ,ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ ಈ ಮಾತನಾಡಿ ಕೇಂದ್ರ ಸರಕಾರದ ಮಲತಾಯಿ ಧೋರಣೆಯನ್ನು ಖಂಡಿಸಿದರು.
ಮಾಜಿ ಮೇಯರ್ ಶಶಿಧರ ಹೆಗ್ಡೆ, ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಪಕ್ಷದ ಧುರೀಣರಾದ ಸುರೇಶ್ ಬಳ್ಳಾಲ್, ಸುದರ್ಶನ ಜೈನ್, ಚಿತ್ತರಂಜನ ಶೆಟ್ಟಿ, ಸುಹನ್ ಆಳ್ವ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.