ಜಂಟಿ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ, ಜ.20: ಜ.22ರಿಂದ 24ರವರೆಗೆ ಹಾಗೂ ಜ.28ರಿಂದ 30ರವರೆಗೆ ಮಣಿಪಾಲದ ಎಂಐಟಿ ಕ್ಯಾಂಪಸ್‌ನಲ್ಲಿರುವ ಡಾ.ಟಿಎಂಎ ಪೈ ಪಾಲಿಟೆಕ್ನಿಕ್‌ನ ಡಿಜಿಟಲ್ ಝೋನ್ ಹಾಗೂ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯಿಂದ ಜಂಟಿ ಪ್ರವೇಶ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತ ವಾಗಿ ನಡೆಯಲು ಹಾಗೂ ನಡೆಯಬಹುದಾದ ಎಲ್ಲಾ ಅವ್ಯವಹಾರ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಪ್ರದೇಶ ವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿ ಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ರಿಂದ 300ಮೀ. ವ್ಯಾಪ್ತಿಯಲ್ಲಿರುವ ಸೈಬರ್ ಕೆಫೆ, ಫೋಟೋಕಾಪಿ, ಪ್ರಿಂಟಿಂಗ್, ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವುದು ಹಾಗೂ ಪರೀಕ್ಷಾ ಕೇಂದ್ರದ ಸುತ್ತ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.