×
Ad

ಶಾಲಾ-ಕಾಲೇಜು ಸಮೀಪದ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಮಾರಿದರೆ ಲೈಸನ್ಸ್ ರದ್ದು: ಎಡಿಸಿ ಸೂಚನೆ

Update: 2025-05-06 22:28 IST

ಮಂಗಳೂರು, ಮೇ 6: ಶಾಲಾ ವಠಾರವನ್ನು ತಂಬಾಕು ಮುಕ್ತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಬೇಕು. ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಬೇಕು. ಈ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮತ್ತು ಬಳಕೆ ಕಂಡು ಬಂದಲ್ಲಿ ಪರವಾನಿಗೆಯನ್ನು ರದ್ದುಗೊಳಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ಪರಿಣಾಮದ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಸರಕಾರಿ ಕಚೇರಿಗಳಲ್ಲದೆ ಸಾರ್ವಜನಿಕ ಪ್ರದೇಶಗಳಲ್ಲೂ ತಂಬಾಕು ಸೇವನೆ ಮತ್ತು ಮಾರಾಟ ನಿಷೇಧಿತ ನಾಮಫಲಕವನ್ನು ಅಳವಡಿಸಬೇಕು. ನಗರಾಡಳಿತ, ಪುರಸಭೆ, ಪಟ್ಟಣ ಪಂಚಾ ಯತ್ ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಪರವಾನಗಿ ಕಡ್ಡಾಯಗೊಳಿಸಬೇಕು. ಪರವಾನಗಿರಹಿತ ತಂಬಾಕು ಮಾರಾಟಗಾರರ ಮೇಲೆ ಕ್ರಮ ಕೈಗೊಳ್ಳುವಂತೆ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದರು.

*ತಂಬಾಕು ಮಾರಾಟ ಮತ್ತು ಬಳಕೆದಾರರ ವಿರುದ್ಧ ನಗರದಲ್ಲಿ 527 ಪ್ರಕರಣಗಳು ದಾಖಲಾಗಿದೆ. ಜನವರಿಯಿಂದ ಈವರೆಗೆ 73,770 ದಂಡ ವಸೂಲಾತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಎಸಿಪಿ ಗೀತಾ ಕುಲಕರ್ಣಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ನವೀನ್‌ಚಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಪ್ರಸಾದ್, ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್, ಪುಂಡಲೀಕ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News