ಕೋಮು ದ್ವೇಷ ಭಾಷಣ ಪ್ರಕರಣ| ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
Update: 2025-05-20 17:42 IST
ಹರೀಶ್ ಪೂಂಜಾ
ಬೆಳ್ತಂಗಡಿ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿಯಾಗಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಇದೀಗ ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಶಾಸಕ ಹರೀಶ್ ಪೂಂಜಾ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ಧ ದ್ವೇಷಕಾರಿದ್ದರು.
ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಶಾಸಕರು ಅತ್ಯಂತ ಪ್ರಚೋದನಕಾರಿಯಾಗಿ ಮಾತನಾಡಿದ್ದ ಹಿನ್ನಲೆಯಲ್ಲಿ ತೆಕ್ಕಾರು ನಿವಾಸಿ ಇಬ್ರಾಹಿಂ ಎಸ್.ಬಿ ಎಂಬವರು ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.