ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಡಾ. ಅಕ್ಷತಾ ಆದರ್ಶ್
ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು ಹೋಗಲಾಡಿಸಿ ರಕ್ಷಣೆಯ ಅಗತ್ಯವಿದ್ದರೆ ಅವರಿಗೆ ಸಹಕರಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್ ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ದ.ಕ. ಜಿಲ್ಲಾಡಳಿತ, ಜಿಪಂ, ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ. ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಪ್ರಕರಣಗಳ ನಿರ್ವಹಣೆ ಹಾಗೂ ಮಕ್ಕಳ ವಿವಿಧ ಕಾನೂನುಗಳ ಅನುಷ್ಠಾನದಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸರು ನೊಂದ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕು. ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು. ಮಕ್ಕಳ ಕಾಯ್ದೆಗಳ ಬಗ್ಗೆ ಸಾರ್ವಜನಿಕರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಬ ಹುದು ಎಂದು ಡಾ. ಅಕ್ಷತಾ ಆದರ್ಶ್ ಅಭಿಪ್ರಾಯಪಟ್ಟರು.
ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸಬೇಕು. ಮಕ್ಕಳ ಜೊತೆ ಸಂಪರ್ಕ ಸಾಧಿಸಿ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯದ ವಾತಾವರಣವನ್ನು ದೂರ ಮಾಡಿ ನೊಂದ ಮಕ್ಕಳಿಗೆ ಭರವಸೆ ಮತ್ತು ಆತ್ಮ ವಿಶ್ವಾಸವನ್ನು ಮೂಡಿಸಬೇಕು ಎಂದು ಡಾ. ಅಕ್ಷತಾ ಆದರ್ಶ್ ಹೇಳಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಜೆಪಿಯು ಸಿಐಡಿ ಪೊಲೀಸ್ ತರಬೇತುದಾರ ರೋಹಿತ್ ಸಿಜಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್, ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.