ಭಾರೀ ಮಳೆ | ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಆಗುತ್ತಿರುವ ಭಾರೀ ಮಳೆಯಿಂದಾಗಿ ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.
ನಗರದ ಪಂಪ್‌ವೆಲ್, ಕೊಟ್ಟಾರ ಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಬಳಿಸ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.