×
Ad

ಅ.26: ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ ಉದ್ಘಾಟನೆ

Update: 2025-07-22 18:23 IST

ಮಂಗಳೂರು , ಜು.22: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್ ) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ‘ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ ‘ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ( ಐಆರ್‌ಸಿಎಸ್) ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಕರ್ನಾಟಕದ ರಾಜ್ಯಪಾಲ ಹಾಗೂ ಐಆರ್‌ಸಿಎಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ.ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್.ಡಿ, ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ಎನ್.ವಿನಯ ಹೆಗ್ಡೆ, ಐಆರ್‌ಸಿಎಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ರಾವ್ ಐಪಿಎಸ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

*6 ಕೋಟಿ ರೂ. ವೆಚ್ಚದ ಕಟ್ಟಡ: 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಮಾರು 20 ಸಾವಿರ ಚದರ ಅಡಿಯ ಭವ್ಯ ಶತಮಾನೋತ್ಸವ ಕಟ್ಟಡ ತಳ ಅಂತಸ್ತು, ನೆಲ ಅಂತಸ್ತು ಸಹಿತ ಒಟ್ಟು 4 ಅಂತಸ್ತು ಹೊಂದಿದೆ. ನೆಲ ಅಂತಸ್ತಿನಲ್ಲಿ ಕಚೇರಿ, ಸಂದರ್ಶಕರ ಕೊಠಡಿ, ಮೀಟಿಂಗ್ ಹಾಲ್, 1ನೇ ಅಂತಸ್ತಿನಲ್ಲಿ 300 ಆಸನಗಳ ‘ಪ್ರೇರಣಾ’ ಹವಾ ನಿಯಂತ್ರಿತ ಸಭಾಂಗಣ, 2ನೇ ಅಂತಸ್ತಿನಲ್ಲಿ ಸುಮಾರು 500 ಮಂದಿ ಸಾಮರ್ಥ್ಯದ ‘ಸೀ ವ್ಯೆ’ಸಭಾಂಗಣವಿದೆ. ಸಾರ್ವಜನಿಕ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು ಮತ್ತು ದಾನಿ ಗಳ ನೆರವಿನಿಂದ ನೂತನ ಕಟ್ಟಡ ನಿರ್ಮಾಣಗೊಂಡಿದೆ ಎಂದು ಶಾಂತರಾಮ ಶೆಟ್ಟಿ ವಿವರಿಸಿದರು.

ದಶಕಗಳ ಹಿಂದೆ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧಿಕಾರಿ ಕಚೇರಿಯ ಒಂದು ಸಣ್ಣ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. 2007ರಲ್ಲಿ ಆಗಿನ ಜಿಲ್ಲಾಧಿಕಾರಿಯವರು ತಮ್ಮ ಕಚೇರಿ ಆವರಣದಲ್ಲಿಯೇ ರೆಡ್‌ಕ್ರಾಸ್ ನಿವೇಶನ ನೀಡಿದ್ದು, 2011ರಲ್ಲಿ ರೆಡ್‌ಕ್ರಾಸ್ ಸ್ವಂತ ಕಟ್ಟಡ ಆ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಜಿಲ್ಲಾ ರೆಡ್‌ಕ್ರಾಸ್ ಸೇವಾ ಚಟುವಟಿಕೆಗಳ ವ್ಯಾಪ್ತಿ ವಿಸ್ತಾರವಾಗಿದ್ದು, ಸಂಸ್ಥೆಯ ಯೋಜನೆಗಳಾದ ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಯ ತರಬೇತಿ ಸಹಿತ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿತ್ತು. ಆ ಹಿನ್ನೆಲೆಯಲ್ಲಿ 2021ರಲ್ಲಿ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ್ದು, ಇದೀಗ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ ಎಂದು ವಿವರಿಸಿದರು.

ಮಾನವೀಯ ಸೇವೆಗಾಗಿ ಸ್ವಿಝರ್ಲೆಂಡ್‌ನ ಹೆನ್ರಿ ಡೂನಾಂಟ್ ಅವರು 1863ರಲ್ಲಿ ಸ್ಥಾಪಿಸಿದ ರೆಡ್‌ಕ್ರಾಸ್ ಸೊಸೈಟಿ ವಿಶ್ವದ ವಿವಿಧ ದೇಶಗಳಲ್ಲಿ ಘಟಕಗಳನ್ನು ಹೊಂದಿದೆ. 1920ರಲ್ಲಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸ್ಥಾಪನೆಯಾಗಿದ್ದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸುಮಾರು 7 ದಶಕದ ಇತಿಹಾಸ ಹೊಂದಿದ್ದು ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರಾಜ್ಯದ ಮುಂಚೂಣಿಯ ಘಟಕವಾಗಿ ಗುರುತಿಸಿಕೊಂಡಿದೆ.

ಮಾನವೀಯ ತತ್ವಗಳನ್ನು ಬೆಳೆಸುವುದು , ಆರೋಗ್ಯ ಕಾರ್ಯಕ್ರಮ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳು ನಿರಂತರ ನಡೆಯುತ್ತಿದ್ದು, ಯೂತ್ ರೆಡ್‌ಕ್ರಾಸ್ , ಜೂನಿಯರ್ ರೆಡ್‌ಕ್ರಾಸ್ ಘಟಕಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ರೆಡ್‌ಕ್ರಾಸ್ ರಕ್ತನಿಧಿ: ಮಂಗಳೂರು ನಗರದ ಲೇಡಿಗೋಶನ್ ಆಸ್ಪತ್ರೆಯ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರ (ಬ್ಲಡ್ ಬ್ಯಾಂಕ್) ವರ್ಷದ 365 ದಿನ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದೆ. ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ದಾಖಲಾಗುವ ಗರ್ಭಿಣಿಯರು, ಬಾಣಂತಿಯರು ಸಹಿತ ಅವಶ್ಯ ಇರುವ ರೋಗಿಗಳಿಗೆ ಉಚಿತವಾಗಿ ರಕ್ತದ ಯುನಿಟ್‌ಗಳನ್ನು ನೀಡುತ್ತಿರು ವುದು ಮಹತ್ವದ ಸಾಧನೆಯಾಗಿ ಪ್ರತಿ ತಿಂಗಳು ಸುಮಾರು 500 ಯುನಿಟ್ ರಕ್ತ ಉಚಿತವಾಗಿ ನೀಡಲಾಗುತ್ತಿದೆ. ಎಂದು ವಿವರಿಸಿದರು.

ನಮ್ಮ ರೆಡ್‌ಕ್ರಾಸ್ ರಕ್ತನಿಧಿ ನಿರಂತರವಾಗಿ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯಿಂದ ಪ್ರಶಸ್ತಿಗಳನ್ನು ಪಡೆದು ಕೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೋವಿಡ್ ಸಂದರ್ಭ ಅರ್ಹ ಫಲಾನುಭವಿಗಳಿಗೆ 10 ಲಕ್ಷ ರೂ. ಮೌಲ್ಯದ ಕಿಟ್ ವಿತರಣೆ, ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವ ಸುಮಾರು 4,000 ಮಂದಿಗೆ ಉಚಿತ ವ್ಯಾಕ್ಸಿನೇಶನ್ ಸೌಲಭ್ಯ, ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ರೆಡ್‌ಕ್ರಾಸ್‌ನಿಂದ ವಾಚನಾಲಯ ಸ್ಥಾಪಿಸಲು ಸಹಾಯಹಸ್ತ ಸಹಿತ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ದ.ಕ ಜಿಲ್ಲಾ ರೆಡ್‌ಕ್ರಾಸ್ ಶತಮಾನೋತ್ಸವ ಭವನ ಒಂದು ಸೇವಾಕಾರ್ಯದ ಕ್ರಿಯಾಶೀಲ ಚಟುವಟಿಕೆಯ ಕೇಂದ್ರವಾಗಿ ಮೂಡಿ ಬರುವ ಆಶಯವಿದೆ. ಇದು ಜಿಲ್ಲೆಯ ಎಲ್ಲ ರೆಡ್‌ಕ್ರಾಸ್ ಸದಸ್ಯರ ಹೆಮ್ಮೆಯ ಪ್ರತೀಕ ವಾಗಲಿದೆ. ರಾಜ್ಯ ರೆಡ್‌ಕ್ರಾಸ್ ಶಾಖೆಯ ನಿರಂತರ ಬೆಂಬಲ, ದಾನಿಗಳ ಉದಾರತೆ , ರೆಡ್‌ಕ್ರಾಸ್ ಸದಸ್ಯರ ಪ್ರೋತ್ಸಾಹ ಸ್ವಾರ್ಥರಹಿತ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದೆ ಎಂದು ಶಾಂತಾರಾಮ ಶೆಟ್ಟಿ ವಿವರಿಸಿದರು.

ದ.ಕ ಜಿಲ್ಲಾ ರೆಡ್‌ಕ್ರಾಸ್ ಸಮಿತಿ ಉಪಾಧ್ಯಕ್ಷ ಡಾ.ಸತೀಶ್ ರಾವ್, ಕೋಶಾಧಿಕಾರಿ ಮೋಹನ್ ಶೆಟ್ಟಿ , ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ , ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಪುಷ್ಪರಾಜ್ ಜೈನ್, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಸುಮನಾ ಬೋಳಾರ್, ಗುರುದತ್ ನಾಯಕ್, ಎ.ವಿಠಲ, ಪಿ..ಬಿ.ಹರೀಶ್ ರೈ ಉಪಸ್ಥಿತರಿದ್ದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News