ಅಧ್ಯಾಪಕ ಭೂಷಣ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವು 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಘೋಷಿಸಿದ್ದು ಪ್ರತಿ ವರ್ಷದಂತೆ ಈ ವರ್ಷವೂ ದ.ಕ, ಉಡುಪಿ, ಕೊಡಗು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಮಾಧವ ಎಂ.ಕೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್, ಸಂವಿಧಾನ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಅನಂತಕೃಷ್ಣ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಅತ್ಯುತ್ತಮ ಶಿಕ್ಷಕ ಆಡಳಿತಗಾರರನ್ನಾಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮತ್ತು ಮಂಗಳೂರಿನ ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅವರನ್ನು ಆಯ್ಕೆ ಮಾಡಲಾಗಿದೆ.
ಸಂಶೋಧನಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಬಾರಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಸ್ಕೂಲ್ ಆಫ್ ಎಕನಾಮಿಕ್ಸ್ ಮಣಿಪಾಲ್ ಯುನಿವರ್ಸಿಟಿಯ ಪ್ರೊ.ಹರೀಶ್ ಜೋಷಿ, ಎಜೆ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಮಂಗಳೂರಿನ ಡಾ.ಶಾಂತಾರಾಮ ರೈ ಸಿ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕಿ ಡಾ. ಸುಭಾಷಿಣಿ ಶ್ರೀವತ್ಸ, ಉಡುಪಿ ಅಜ್ಜರಕಾಡು ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ರಾಜೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರೊ.ವಿಜಯಲತ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಯಶೋಧ, ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ರಾಧಾಕೃಷ್ಣ, ವಿರಾಜಪೇಟೆ ಕಾವೇರಿ ಕಾಲೇಜಿನ ತಮ್ಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯನ್ನು ಜು.26ರಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿರುವ ‘ಪ್ರೇರಣಾ ದಿವಸ್-2025’ರಲ್ಲಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ನಾಯಕ್, ವಿಭಾಗದ ಅಧ್ಯಕ್ಷ ಪ್ರೊ.ವಾಣಿ ಯು.ಎಸ್, ಕಾರ್ಯದರ್ಶಿ ರಾಜೇಶ್ ಕುಮಾರ್, ಉಡುಪಿ ಜಿಲ್ಲಾಧ್ಯಕ್ಷ ಪ್ರೊ. ಸುರೇಂದ್ರ ಶೆಟ್ಟಿ, ಸಮಿತಿ ಸದಸ್ಯೆ ಆಶಾಲತಾ, ಮಾಧ್ಯಮ ಪ್ರಮುಖ್ ಮಮತಾ ಉಪಸ್ಥಿತರಿದ್ದರು.