ಹಿರಿಯ ಛಾಯಾಗ್ರಾಹಕ ಯಜ್ಞ ಅವರಿಗೆ ರಾಜ್ಯೋತ್ಸವ ಗೌರವ ಪ್ರಶಸ್ತಿ
ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ನ.8ರ ಅಪರಾಹ್ನ 3ಕ್ಕೆ ನಗರದ ಡಾನ್‌ಬಾಸ್ಕೋ ಹಾಲ್‌ನಲ್ಲಿ ಜರಗಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಅವರಿಗೆ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಚಿತ್ರಾಪುರ ಮಠಾಧೀಶ ವಿಜ್ಯೇಂದ್ರ ತೀರ್ಥರ ಉಪಸ್ಥಿತಿಯಲ್ಲಿ ಜರಗಲಿರುವ ಕಾರ್ಯಕ್ರಮಮದಲ್ಲಿ ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಕರಾವಳಿ ಲೇಖಕಿ-ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆಟ್ಟಿ ಕನ್ನಡ ಧ್ವಜಾರೋಹಣ ಮಾಡುವರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಪುಷ್ಪಾರ್ಚನೆ ಮಾಡುವರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ತುಳು ಅಕಾಡಮಿಯ ಮಾಜಿ ಅಧ್ಯಕ್ಷ ಎ.ಸಿ ಭಂಡಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವರು ಎಂದು ಕಲ್ಕೂರ ಪ್ರತಿಷ್ಠಾನದ ಪ್ರಕಟನೆ ತಿಳಿಸಿದೆ.