×
Ad

ಸುಳ್ಯ| ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

Update: 2026-01-20 22:56 IST

ಬೆಳ್ಳಾರೆ: ಗ್ರಾಮದ ದರ್ಖಾಸು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಬೆಳ್ಳಾರೆ ದರ್ಖಾಸು ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದ ಸೆಲ್ವ ಕುಮಾರ್ 2020 ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್‍ನ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಮತ್ತು ಪೊಕ್ಸೋ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಒಟ್ಟು 17 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಆರೋಪಿ ವಿರುದ್ಧ ಸಂತ್ರಸ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.

ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬೆಳ್ಳಾರೆ ಪೊಲೀಸರು ವಿವರವಾದ ಸಾಕ್ಷ್ಯ ನೀಡಿದರು. ನ್ಯಾಯಾಧೀಶೆ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಪೊಕ್ಸೋ ಕಾಯ್ದೆಯಡಿಯ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20 ಸಾವಿರ ದಂಡ, ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ನೀಡಿ ಆದೇಶಿದ್ದಾರೆ. ದಂಡದ ಮೊತ್ತದಲ್ಲಿ ರೂ.20 ಸಾವಿರವನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ಸರಕಾರದ ಪರ ಪೊಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News