ಛತ್ತೀಸ್‌ಗಢ | ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತ್ಯು
Update: 2025-07-27 16:46 IST
Photo | indiatoday
ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಬಸಗುಡ ಮತ್ತು ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಡಿ ಅರಣ್ಯದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದಾರೆ.
ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಈ ಕುರಿತು ಮಾಹಿತಿ ನೀಡಿದ್ದು, ನಕ್ಸಲ್ ಚಟುವಟಿಕೆ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಿಜಾಪುರದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.