ಲೈಂಗಿಕ ಕಿರುಕುಳ ಆರೋಪ | ಪ್ರಕರಣ ದಾಖಲಾದ ಬೆನ್ನಲ್ಲೇ ಬ್ಯಾಂಕ್‌ನಿಂದ 50 ಲಕ್ಷಕ್ಕೂ ಅಧಿಕ ಹಣ ವಿತ್‌ಡ್ರಾ ಮಾಡಿದ ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ
ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ (Photo credit: indiatoday.in)
ಹೊಸದಿಲ್ಲಿ: ದಿಲ್ಲಿಯ ಸಂಸ್ಥೆಯೊಂದರಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಬೇರೆ ಬೇರೆ ಹೆಸರುಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಾದ ನಂತರ 50 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಸಮಯದಲ್ಲಿ ಚೈತನ್ಯಾನಂದ ಸರಸ್ವತಿ ಎರಡು ವಿಭಿನ್ನ ಹೆಸರುಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾನೆ. ಬೇರೆ ಬೇರೆ ದಾಖಲೆ ನೀಡಿ ಖಾತೆ ತೆರೆದು ಹಣ ವರ್ಗಾವಣೆ ಮಾಡಿದ್ದಾನೆ ಎಂಬುದು ಪತ್ತೆಯಾಗಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಎಫ್ಐಆರ್ ದಾಖಲು ಬಳಿಕ ಸುಮಾರು 50 ರಿಂದ 55 ಲಕ್ಷ ರೂ.ಗಳನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ ವಂಚನೆ, ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣದಲ್ಲಿ ಸರಸ್ವತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿಲ್ಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠವು ನಡೆಸುತ್ತಿರುವ ದಿಲ್ಲಿಯ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಯ ಉಸ್ತುವಾರಿ ಸ್ವಾಮಿ ಚೈತನ್ಯಾನಂದ, ಪೀಠದ ಆಸ್ತಿಗಳನ್ನು ಅಕ್ರಮವಾಗಿ ಖಾಸಗಿ ಸಂಸ್ಥೆಗಳಿಗೆ ಉಪಬಾಡಿಗೆಗೆ ನೀಡುವ ಮೂಲಕ ಶಿಕ್ಷಣ ಸಂಸ್ಥೆಯ ಮೇಲೆ ತನ್ನ ನಿಯಂತ್ರಣವನ್ನು ಬಿಗಿಗೊಳಿಸಿದ್ದನ್ನು ತನಿಖೆಯು ಬಹಿರಂಗಗೊಳಿಸಿದೆ ಎಂದು ದಿಲ್ಲಿ ಪೋಲಿಸರು ಹೇಳಿದ್ದಾರೆ.