ಸಕಲ ಸರ್ಕಾರಿ ಗೌರವಗಳೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ
Screengrab:X/ANI
ಪುಣೆ: ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಗುರುವಾರ (ಜನವರಿ 29, 2026) ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಕುಟುಂಬ ಸದಸ್ಯರು, ಕೇಂದ್ರ ಹಾಗೂ ರಾಜ್ಯ ಸಚಿವರು, ವಿವಿಧ ಪಕ್ಷಗಳ ನಾಯಕರು ಮತ್ತು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಯ ವೇಳೆ ಪತ್ನಿ ಸುನೇತ್ರ ಪವಾರ್ ಹಾಗೂ ಪುತ್ರ ಜಯ್ ಅವರು ಚಿತೆಗೆ ಅಂತಿಮ ನಮನ ಸಲ್ಲಿಸಿದರು. ಸಂಪ್ರದಾಯಬದ್ಧ ವಿಧಿವಿಧಾನಗಳನ್ನು ನೆರವೇರಿಸಿದರು. ಶೋಕವಾತಾವರಣ ಆವರಿಸಿದ್ದ ಮೈದಾನದಲ್ಲಿ ಪವಾರ್ ಅವರ ಅಗಲಿಕೆಗೆ ಕುಟುಂಬಸ್ಥರು ಹಾಗೂ ಬೆಂಬಲಿಗರು ಕಂಬನಿ ಮಿಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಪುಷ್ಪಗುಚ್ಛ ಇಟ್ಟು ಗೌರವ ಸಲ್ಲಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಸಿಎಂ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಅಜಿತ್ ಪವಾರ್ ಅವರ ಸಾರ್ವಜನಿಕ ಸೇವೆಯನ್ನು ನಾಯಕರು ಸ್ಮರಿಸಿದರು.