ಆಲಿಗಢ ಮುಸ್ಲಿಂ ವಿವಿ ಕ್ಯಾಂಪಸ್‌ನಲ್ಲಿ ಗುಂಡಿಕ್ಕಿ ಅಧ್ಯಾಪಕನ ಹತ್ಯೆ
ಸಾಂದರ್ಭಿಕ ಚಿತ್ರ
ಆಲಿಗಢ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಲಿಗಢದಲ್ಲಿನ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅಧ್ಯಾಪಕನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಅಧ್ಯಾಪಕರನ್ನು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಎಬಿಕೆ ಶಾಲೆಯಲ್ಲಿ ಬೋಧಿಸುತ್ತಿದ್ದ ರಾವ್ ದಾನಿಶ್ ಅಲಿ ಎಂದು ಗುರುತಿಸಲಾಗಿದೆ.
ಅಧ್ಯಾಪಕ ದಾನಿಶ್ ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಮೌಲಾನಾ ಆಝಾದ್ ಗ್ರಂಥಾಲಯದ ಬಳಿ ವಾಯುವಿಹಾರಕ್ಕೆಂದು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ದಾಳಿಕೋರರು ದ್ವಿಚಕ್ರವಾಹನದಲ್ಲಿ ಬಂದಿದ್ದು, ಅವರನ್ನೆಲ್ಲ ಪಿಸ್ತೂಲಿನಲ್ಲಿ ಬೆದರಿಸಿದ್ದಾರೆ. ಬಳಿಕ ಅಲಿ ಮೇಲೆ ಮೂರು ಸುತ್ತಿನ ಗುಂಡು ಹಾರಿಸಿದರೆ, ತಲೆಗೆ ಎರಡು ಸುತ್ತಿನ ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಗ್ರಂಥಾಲಯದ ಬಳಿ ಗುಂಡಿನ ದಾಳಿ ನಡೆದಿರುವ ಬಗ್ಗೆ ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಲಾಯಿತು. ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣವೇ ಜವಾಹರ್ ಲಾಲ್ ನೆಹರೂ ವೈದ್ಯಕೀಯ ಕಾಲೇಜಿಗೆ ಕೊಂಡೊಯ್ಯಲಾಯಿತು ಎಂದು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಕ್ಟರ್ ಮುಹಮ್ಮದ್ ವಾಸೀಂ ತಿಳಿಸಿದ್ದಾರೆ.
ಈ ದಾಳಿಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.