ಅಲಹಾಬಾದ್ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ 21 ಬಾರಿ ಮುಂದೂಡಿಕೆ!
ಸಿಡಿಮಿಡಿಗೊಂಡ ಸುಪ್ರೀಂ ಕೋರ್ಟ್
ಅಲಹಾಬಾದ್ ಹೈಕೋರ್ಟ್ | PTI
ಹೊಸದಿಲ್ಲಿ, ಆ. 29: ಜಾಮೀನು ಅರ್ಜಿಯೊಂದರ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ 21 ಬಾರಿ ಮುಂದೂಡಿರುವ ವಿಷಯವನ್ನು ಶುಕ್ರವಾರ ಗಂಭೀರವಾಗಿ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ತುರ್ತಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದೆ ಹಾಗೂ ಈ ವಿಷಯದ ಬಗ್ಗೆ ಗಮನ ಹರಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸೂಚಿಸಿದೆ.
‘‘ನಾಗರಿಕರ ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ತುರ್ತಾಗಿ ವಿಚಾರಣೆ ನಡೆಸಿ ಇತ್ಯರ್ಥಪಡಿಸಬೇಕು ಎನ್ನುವುದನ್ನು ನಾವು ಪದೇ ಪದೇ ಹೆಳುತ್ತಿದ್ದೇವೆ. ಅದರಂತೆ, ಈ ಪ್ರಕರಣವನ್ನು ಕ್ಷಿಪ್ರವಾಗಿ ಇತ್ಯರ್ಥಪಡಿಸುವಂತೆ ನಾನು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಮನವಿ ಮಾಡುತ್ತೇವೆ’’ ಎಂದು ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಎನ್.ವಿ. ಅಂಜಾರಿಯ ಮತ್ತು ನ್ಯಾಯಮೂರ್ತಿ ಅಲೋಕ್ ಅರಾದೆ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವೊಂದು ಹೇಳಿತು.
ಕುಲದೀಪ್ ಎಂಬವರ ಜಾಮೀನು ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ 21 ಬಾರಿ ಮುಂದೂಡಿದೆ ಮತ್ತು ಈಗ ಅರ್ಜಿಯ ಮುಂದಿನ ವಿಚಾರಣೆಯನ್ನು ಎರಡು ತಿಂಗಳ ನಂತರದ ದಿನಾಂಕವೊಂದಕ್ಕೆ ನಿಗದಿಪಡಿಸಲಾಗಿದೆ ಎಂದು ಅವರ ವಕೀಲ ಸುಪ್ರೀಂ ಕೋರ್ಟ್‌ಗೆ ತಿಳಿಸಿದಾಗ ಸರ್ವೋಚ್ಛ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.
ಈ ಪ್ರಕರಣದಲ್ಲಿ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ‘‘ಕನಿಷ್ಠ ಮುಂದಿನ ವಿಚಾರಣೆಯಲ್ಲಾದರೂ, ಅವರ ಜಾಮೀನು ಅರ್ಜಿಯ ಬಗ್ಗೆ ಹೈಕೋರ್ಟ್ ನಿರ್ಧಾರವೊಂದನ್ನು ತೆಗೆದುಕೊಳ್ಳಬಹುದು’’ ಎಂದು ಹೇಳಿತು. ಆಗಲೂ ಸಿಗದಿದ್ದರೆ, ಅರ್ಜಿದಾರರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಬರಬಹುದು ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು.