×
Ad

ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ನಾಳೆ(ಜ. 27) ಬ್ಯಾಂಕ್‌ ನೌಕರರ ರಾಷ್ಟ್ರವ್ಯಾಪಿ ಮುಷ್ಕರ

Update: 2026-01-26 21:20 IST

ಸಾಂದರ್ಭಿಕ ಚಿತ್ರ | Photo Credit : PTI

ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬ್ಯಾಂಕ್‌ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ.

ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಾವುದೇ ಸಕಾರಾತ್ಮಕ ಫಲಿತಾಂಶ ನೀಡದ ಹಿನ್ನೆಲೆಯಲ್ಲಿ, ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ (ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್–ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿದೆ.

ಈ ಮುಷ್ಕರದಿಂದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಪಂಜಾಬ್ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್‌ಗಳ ಶಾಖೆಗಳಲ್ಲಿ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ ಮೊದಲಾದ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗುವ ಸಾಧ್ಯತೆ ಇದೆ.

ಆದರೆ ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್ ಬ್ಯಾಂಕ್‌ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್‌ಗಳ ವಹಿವಾಟಿನ ಮೇಲೆ ಮುಷ್ಕರದ ಯಾವುದೇ ಪರಿಣಾಮ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ಕೆಲವೆಡೆ ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

ಎಸ್‌ಬಿಐ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್‌ಗಳು ಮುಷ್ಕರದ ಕುರಿತು ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿವೆ.

ಎಲ್ಲ ಶನಿವಾರಗಳನ್ನು ರಜಾದಿನಗಳನ್ನಾಗಿ ಘೋಷಿಸುವ ಕುರಿತು ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್‌ಬಿಯು ನಡುವೆ 2024ರ ಮಾರ್ಚ್‌ನಲ್ಲಿ ನಡೆದ ವೇತನ ಪರಿಷ್ಕರಣೆ ಚರ್ಚೆಗಳ ಸಂದರ್ಭದಲ್ಲಿ ಒಪ್ಪಂದವಾಗಿತ್ತು. ಆದರೆ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ರೂಪಮ್ ರಾಯ್ ಹೇಳಿದ್ದಾರೆ.

‘ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ. ಪ್ರತೀ ಶನಿವಾರ ರಜೆ ನೀಡಿದರೂ ಕೆಲಸದ ದಿನಗಳು ನಷ್ಟವಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯಲ್ಲಿ ನಮ್ಮ ಬೇಡಿಕೆಗಳ ಕುರಿತು ಯಾವುದೇ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ವೆಂಕಟಾಚಲಂ ತಿಳಿಸಿದ್ದಾರೆ. ಪ್ರಸ್ತುತ ನಿಯಮಗಳ ಪ್ರಕಾರ ಪ್ರತೀ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ.

ಈ ಬ್ಯಾಂಕ್‌ಗಳಲ್ಲಿ ನಾಳೆ ಅಡಚಣೆ ಸಾಧ್ಯ

ಭಾರತೀಯ ಸ್ಟೇಟ್‌ ಬ್ಯಾಂಕ್‌, ಪಂಜಾಬ್ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾ, ಕೆನರಾ ಬ್ಯಾಂಕ್‌ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಶಾಖೆಗಳಲ್ಲಿ ಶಾಖೆಗೆ ಭೇಟಿ ನೀಡಿ ಪಡೆಯುವ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ ಮೊದಲಾದ ಸೇವೆಗಳು ಅಡಚಣೆಗೆ ಒಳಗಾಗುವ ಸಾಧ್ಯತೆ ಇದೆ. ಕೆಲವೆಡೆ ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಎದುರಾಗಬಹುದು.

ಈ ಸೇವೆಗಳು ಎಂದಿನಂತೆ ಇರಲಿದೆ

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಬ್ಯಾಂಕಿಂಗ್ ಸೇವೆಗಳು ಯಾವುದೇ ವ್ಯತ್ಯಯವಿಲ್ಲದೆ ಎಂದಿನಂತೆ ಕಾರ್ಯನಿರ್ವಹಿಸಲಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News