×
Ad

ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ

Update: 2023-12-15 15:40 IST

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ (PTI)

ಹೊಸದಿಲ್ಲಿ: ಬೆಳಗಾವಿಯಲ್ಲಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಮತ್ತು ನಗ್ನ ಮೆರವಣಿಗೆ ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಈ ಘಟನೆ “ನಾಚಿಕೆಗೇಡು” ಎಂದು ಬಣ್ಣಿಸಿದ್ಧಾರೆ. ಮಹಿಳೆಯರ ವಿರುದ್ಧದ ಇಂತಹ ಬರ್ಬರ ಅಪರಾಧಗಳು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಆಗಾಗ ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಪಕ್ಷದ ಮಹಿಳಾ ಸಂಸದರನ್ನೊಳಗೊಂಡ ಪಂಚ-ಸದಸ್ಯರ ಸತ್ಯಶೋಧನಾ ಸಮಿತಿಯನ್ನೂ ನಡ್ಡಾ ರಚಿಸಿದ್ದಾರೆ. ಈ ಸಮಿತಿಯು ಈ ಘಟನೆ ನಡೆದ ಗ್ರಾಮಕ್ಕೆ ತೆರಳಿ ಅಲ್ಲಿನ ಘಟನೆಯ ಬಗ್ಗೆ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಹೇಳಿದ್ದಾರೆ.

ಡಿಸೆಂಬರ್‌ 11ರಂದು ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ, ಮಹಿಳೆಯ ಮಗ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ನಡೆಯಲಿದ್ದ ಹುಡುಗಿಯೊಂದಿಗೆ ಓಡಿ ಹೋದನೆಂಬ ಕಾರಣಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿ, ನಗ್ನ ಮೆರವಣಿಗೆ ನಡೆಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಲಾಗಿತ್ತು ಎಂದು ದೂರಲಾಗಿದೆ.

ಈ ಸಂಬಂಧ ಎಂಟು ಮಂದಿಯನ್ನು ಬಂಧಿಸಿರುವ ಪೊಲೀಸರು ಇನ್ನೂ ಎಂಟು ಆರೋಪಿಗಳಿಗೆ ಶೋಧ ಮುಂದುವರಿಸಿದ್ಧಾರೆ. ಈ ಘಟನೆಯನ್ನು ಕರ್ನಾಟಕ ಹೈಕೋರ್ಟ್‌ ಕೂಡ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.

ಈ ಘಟನೆಯನ್ನು ಖಂಡಿಸಿ ಬಿಜೆಪಿ ಡಿಸೆಂಬರ್‌ 16ರಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News