ಪ್ರಧಾನಿ ಮೋದಿ ಪದವಿ ಕುರಿತ ದಾಖಲೆ ನ್ಯಾಯಾಲಯಕ್ಕೆ ಸಲ್ಲಿಕೆಗೆ ಅಭ್ಯಂತರವಿಲ್ಲ : ಹೈಕೋರ್ಟ್‌ಗೆ ತಿಳಿಸಿದ ದಿಲ್ಲಿ ವಿವಿ
ನರೇಂದ್ರ ಮೋದಿ | PTI
ಹೊಸದಿಲ್ಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪದವಿ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಕೆಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಆರ್‌ಟಿಐ ಅಡಿಯಲ್ಲಿ ಅಪರಿಚಿತರಿಗೆ ಈ ಕುರಿತು ಮಾಹಿತಿ ಬಹಿರಂಗಪಡಿಸುವುದು ಸಾಧ್ಯವಿಲ್ಲ ಎಂದು ದಿಲ್ಲಿ ವಿಶ್ವವಿದ್ಯಾನಿಲಯ ಹೈಕೋರ್ಟ್‌ಗೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ(ಸಿಐಸಿ) ನೀಡಿದ್ದ ಆದೇಶ ಪ್ರಶ್ನಿಸಿ ದಿಲ್ಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ದತ್ತಾ ಈ ಕುರಿತು ತೀರ್ಪುನ್ನು ಕಾಯ್ದಿರಿಸಿದ್ದಾರೆ.
1978ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಾ ಪದವಿಯನ್ನು ಪಡೆದ ಬಗ್ಗೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಪ್ರಸ್ತುತಪಡಿಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಆರ್‌ಟಿಐಯಡಿ ಅನಾಮಧೇಯ ವ್ಯಕ್ತಿಗಳಿಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ದಿಲ್ಲಿ ವಿಶ್ವವಿದ್ಯಾಲಯ ಹೈಕೋರ್ಟ್‌ಗೆ ತಿಳಿಸಿದೆ.
ದಿಲ್ಲಿ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಯು ರಾಜಕೀಯ ಪ್ರೇರಿತವಾಗಿದೆ. ʼಕುತೂಹಲʼವು ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿ ಕೇಳಲು ಸೂಕ್ತವಾದ ಕಾರಣವಲ್ಲ ಎಂದು ವಾದಿಸಿದ್ದಾರೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರಾದ ಸಂಜಯ್ ಹೆಗ್ಡೆ, ಶೈಕ್ಷಣಿಕ ವಿವರಗಳು ಸಾರ್ವಜನಿಕ ಮಾಹಿತಿಯಾಗಿದ್ದು, ನೋಟಿಸ್ ಬೋರ್ಡ್‌ಗಳು ಮತ್ತು ಪತ್ರಿಕೆಗಳಲ್ಲಿ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತದೆ ಎಂದು ವಾದಿಸಿದರು.
ಮೋದಿ ಅವರು 1978ರಲ್ಲಿ ದಿಲ್ಲಿ ವಿಶ್ವವಿದ್ಯಾಲಯದಿಂದ ಬಿಎ ಪದವಿ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ವಿರೋಧ ಪಕ್ಷ ಆಪ್ ಇದು ನಕಲಿ ಎಂದು ಹೇಳಿಕೊಂಡಿತ್ತು.