×
Ad

ಭ್ರಷ್ಟಾಚಾರ ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಸಿಬಿಐ

Update: 2025-05-23 12:44 IST

 ಸತ್ಯಪಾಲ್ ಮಲಿಕ್ (Photo: PTI)

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹಾಗೂ ಇತರ ಐವರ ವಿರುದ್ಧ ಪ್ರಕರಣವೊಂದರ ಸಂಬಂಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.

ಕಿರು ಜಲವಿದ್ಯುತ್ ಯೋಜನೆಯಲ್ಲಿ 2,200 ಕೋಟಿ ರೂ. ಮೊತ್ತದ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಮಲಿಕ್ ಹಾಗೂ ಇತರ ಐವರ ವಿರುದ್ಧ ಮೂರು ವರ್ಷಗಳ ನಂತರ ಚಾರ್ಜ್ಶೀಟ್ ಸಲ್ಲಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸತ್ಯಪಾಲ್ ಮಲಿಕ್, "ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನನಗೆ ಕರೆ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಾನು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ" ಎಂದು ಪೋಸ್ಟ್‌ ಮಾಡಿದ್ದಾರೆ.

ಈ ವರ್ಷದ ಫೆಬ್ರವರಿ 22 ರಂದು ಮಲಿಕ್ ಅವರ ಮನೆ ಮತ್ತು ಇತರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಮಲಿಕ್ ಜೊತೆಗೆ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ನ (ಸಿವಿಪಿಪಿಪಿಎಲ್) ಆಗಿನ ಅಧ್ಯಕ್ಷ ನವೀನ್ ಕುಮಾರ್ ಚೌಧರಿ, ಅಧಿಕಾರಿಗಳಾದ ಎಂಎಸ್ ಬಾಬು, ಎಂಕೆ ಮಿತ್ತಲ್ ಮತ್ತು ಅರುಣ್ ಕುಮಾರ್ ಮಿಶ್ರಾ, ಅಲ್ಲದೆ, ಪಟೇಲ್ ಇಂಜಿನಿಯರಿಂಗ್ ಲಿಮಿಟೆಡ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.

ಮಲಿಕ್ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ನಿರಾಕರಿಸಿದ್ದರು.

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಕ್ಕಾಗಿ‌ ಸತ್ಯಪಾಲ್ ಮಲಿಕ್ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿವೆ.

ತಾನು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಯೋಜನೆಗೆ ಸಂಬಂಧಿಸಿದ ಎರಡು ಫೈಲ್‌ಗಳಿಗೆ ಸಹಿ ಹಾಕಲು ತನಗೆ 300 ಕೋಟಿ ರೂ. ಗಳ ಲಂಚದ ಆಮಿಷ ನೀಡಲಾಗಿತ್ತು ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು.

ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದಾಗ ವಿಮಾನ ಕಳಿಸದ ಕುರಿತು ಪ್ರಧಾನಿ ಮೋದಿಗೆ ಹೇಳಿದಾಗ ಅದರ ಬಗ್ಗೆ ಮಾತಾಡಬೇಡಿ ಎಂದು ನನ್ನ ಬಾಯಿ ಮುಚ್ಚಿಸಿದ್ದರು ಎಂದೂ ಸತ್ಯಪಾಲ್ ಮಲಿಕ್ ಆರೋಪ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News