ತಮಿಳುನಾಡಿನಲ್ಲಿ ಎಸ್ಐಆರ್‌ಗೆ ಸಿಎಂ ಸ್ಟಾಲಿನ್ ವಿರೋಧ : ಚುನಾವಣಾ ಆಯೋಗದ ಕ್ರಮವನ್ನು ಸ್ವಾಗತಿಸಿದ ಎಐಎಡಿಎಂಕೆ, ಬಿಜೆಪಿ
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ (PTI)
ಚೆನ್ನೈ : 2026ರ ವಿಧಾನಸಭಾ ಚುನಾವಣೆಗೆ ಮೊದಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳುವ ಭಾರತೀಯ ಚುನಾವಣಾ ಆಯೋಗದ (ECI) ನಿರ್ಧಾರವನ್ನು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಟೀಕಿಸಿದ್ದಾರೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸದಂತೆ ಮಾಡುವ ಯಾವುದೇ ಪ್ರಯತ್ನದ ವಿರುದ್ಧ ಹೋರಾಡುವುದಾಗಿ ಹೇಳಿದ್ದಾರೆ.
ಚುನಾವಣಾ ಆಯೋಗದ ಕ್ರಮವನ್ನು ಆತುರದಿಂದ ಕೂಡಿದ ನಿರ್ಧಾರ ಮತ್ತು ಅಪಾರದರ್ಶಕ ಎಂದು ಕರೆದ ಸ್ಟಾಲಿನ್, ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ. ಈ ಹಕ್ಕನ್ನು ಕಸಿದುಕೊಳ್ಳಲು ಯಾವುದೇ ಪ್ರಯತ್ನ ಮಾಡಿದರೂ ತಮಿಳುನಾಡು ಅದರ ವಿರುದ್ಧ ಹೋರಾಡುತ್ತದೆ ಮತ್ತು ಗೆಲುವನ್ನು ಸಾಧಿಸುತ್ತದೆ ಎಂದು ಸ್ಟಾಲಿನ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಹೆಸರನ್ನು ದೊಡ್ಡ ಪ್ರಮಾಣದಲ್ಲಿ ಡಿಲಿಟ್ ಮಾಡಲು ಕಾರಣವಾಗಿದೆ. ಇದು ಪ್ರಕ್ರಿಯೆಯ ಪಾರದರ್ಶಕತೆಯ ಬಗ್ಗೆ ಅನುಮಾನವನ್ನು ಹೆಚ್ಚಿಸಿದೆ ಎಂದು ಸ್ಟಾಲಿನ್ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಎರಡನೇ ಹಂತದಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದರು.
ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಈ ಕುರಿತು ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದ್ದರು. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಆಡಳಿತಾತ್ಮಕ ಪ್ರಕ್ರಿಯೆ ಎಂದು ಹೇಳಿದರು.
ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಕೂಡ ಚುನಾವಣಾ ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.