ಪಹಲ್ಗಾಮ್ ದಾಳಿಯ ಭಯೋತ್ಪಾದಕರನ್ನು ನ್ಯಾಯದ ಕಟಕಟೆಗೆ ತರಲಾಗಿಲ್ಲ : ಜಮ್ಮುಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿಗೆ ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ (PTI)
ಹೊಸದಿಲ್ಲಿ : ಪಹಲ್ಗಾಮ್ ದಾಳಿಗೆ ನೇರವಾಗಿ ಕಾರಣರಾದ ಭಯೋತ್ಪಾದಕರನ್ನು ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಜಮ್ಮುಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ.
ಪ್ರಧಾನಿ ಮೋದಿ ಶುಕ್ರವಾರ ಜಮ್ಮುಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಕತ್ರಾ ಮತ್ತು ಶ್ರೀನಗರ ನಡುವಿನ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಪ್ರಧಾನಿ ಮೋದಿ ನಾಳೆ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಗೆ ನೇರವಾಗಿ ಕಾರಣರಾದ ಭಯೋತ್ಪಾದಕರನ್ನು ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಅವರಿಗೆ ತಿಳಿದಿದೆ. ಈ ಭಯೋತ್ಪಾದಕರು 2023ರ ಡಿಸೆಂಬರ್‌ನಲ್ಲಿ ಪೂಂಚ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿ ಮತ್ತು ಅಕ್ಟೋಬರ್ 2024ರಲ್ಲಿ ಗಗಂಗೀರ್ ಮತ್ತು ಗುಲ್ಮಾರ್ಗ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಬಗ್ಗೆಯೂ ವರದಿಯಾಗಿದೆ ಎಂದು ಜೈರಾಮ್ ರಮೇಶ್ ಹೇಳಿದರು.
ಪಹಲ್ಗಾಮ್ ದಾಳಿಗೆ ಕಾರಣರಾದ ಭಯೋತ್ಪಾದಕರು ಜಮ್ಮುಕಾಶ್ಮೀರದಲ್ಲಿ ಈ ಹಿಂದೆ ನಡೆದ ಮೂರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿ ಈ ಕುರಿತು ಸ್ಪಷ್ಟನೆ ನೀಡುವಂತೆ ಕಳೆದ ತಿಂಗಳು ಜೈರಾಮ್ ರಮೇಶ್ ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದರು.