×
Ad

ರಾಜಸ್ಥಾನ | ಪಾದಚಾರಿಗಳು ಮತ್ತು ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಕಾರು; ಪಾನಮತ್ತ ಚಾಲಕನ ಅವಾಂತರಕ್ಕೆ ಮೂವರು ಮೃತ್ಯು, 8 ಮಂದಿಗೆ ಗಾಯ

Update: 2025-04-08 13:11 IST

Photo credit: indiatoday.in

ಜೈಪುರ: ಸೋಮವಾರ ತಡರಾತ್ರಿ ರಾಜಸ್ಥಾನದ ಜೈಪುರದ ನಹರ್‌ಗಢ ಪ್ರದೇಶದಲ್ಲಿ ಎಸ್‌ಯುವಿ ಕಾರೊಂದು ಪಾದಚಾರಿಗಳು ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಮಮತಾ ಕನ್ವರ್(50), ಅವಧೇಶ್ ಪರೀಕ್ ಮತ್ತು ವೀರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳು ಎಸ್ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದರು. ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಎಸ್ಎಂಎಸ್ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕನ್ಹಯ್ಯಾಲಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, ಕಾರೊಂದು ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆವು. ಕಾರನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನನ್ನು ಬಂಧಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಚಾಲಕ ಮದ್ಯಪಾನ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೆಲ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದರು.

ಕಿಶನ್‌ಪೋಲ್‌ ಶಾಸಕ ಅಮೀನ್ ಕಗ್ಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News