×
Ad

ಅಬಕಾರಿ ನೀತಿ ಹಗರಣ |ಮನೀಷ್ ಸಿಸೋಡಿಯಾಗೆ ಮತ್ತೆ ಜಾಮೀನು ನಿರಾಕರಣೆ

Update: 2024-04-30 20:50 IST

ಮನೀಷ್ ಸಿಸೋಡಿಯಾ | PC : PTI 

ಹೊಸದಿಲ್ಲಿ : ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಹಾಗೂ ಲಂಚ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ದಿಲ್ಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ಕೆಳ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿರುವುದನ್ನು ಪ್ರಶ್ನಿಸಿ ಮನೀಷ್ ಸಿಸೋಡಿಯಾ ಅವರು ದಿಲ್ಲಿ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಸಿಬಿಐ ದಾಖಲಿಸಿದ ಹಣ ಅಕ್ರಮ ವರ್ಗಾವಣೆ ಹಾಗೂ ಲಂಚ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಮನೀಷ್ ಸಿಸೋಡಿಯಾ ಅವರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಸಿಸೋಡಿಯಾಗೆ ಜಾಮೀನು ನಿರಾಕರಿಸಿದ್ದಾರೆ. ಅಲ್ಲದೆ, ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಇದು ಸರಿಯಾದ ಸಮಯವಲ್ಲ ಎಂದು ಹೇಳಿದ್ದಾರೆ.

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಸರಕಾರದಲ್ಲಿ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಸಿಸೋಡಿಯಾ ಅವರನ್ನು ಸಿಬಿಐ ಕಳೆದ ವರ್ಷ ಫೆಬ್ರವರಿ 26ರಂದು ಬಂಧಿಸಿತ್ತು. ಅನಂತರ ಇದೇ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News