ಲಡಾಖ್ ರಾಜ್ಯ ಸ್ಥಾನಮಾನಕ್ಕೆ ಆಗ್ರಹ: ಸತತ ನಾಲ್ಕನೇ ದಿನವೂ ಕರ್ಫ್ಯೂ ಮುಂದುವರಿಕೆ
Photo credit: PTI
ಲೇಹ್: ಲಡಾಖ್ ಗೆ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಲೇಹ್ ನಲ್ಲಿ ನಡೆದ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ನಗರದಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸತತ ನಾಲ್ಕನೇ ದಿನವಾದ ಶನಿವಾರವೂ ಮುಂದುವರಿದಿದೆ.
“ಲಡಾಖ್ ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದ್ದು, ಪೂರ್ವಾನುಮತಿಯಿಲ್ಲದೆ ಯಾವುದೇ ಮೆರವಣಿಗೆ ಅಥವಾ ಸಮಾವೇಶ ನಡೆಸುವಂತಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ, ಲೇಹ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ಲೇಹ್ ಅಪೆಕ್ಸ್ ಬಾಡಿ ಬುಧವಾರ ಬಂದ್ ಗೆ ಕರೆ ನೀಡಿತ್ತು. ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವಿನ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಲಡಾಖ್ ಗೆ ರಾಜ್ಯದ ಸ್ಥಾನಮಾನ ನೀಡಬೇಕು, ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ, ಅದನ್ನು ಸ್ವಾಯತ್ತ ಪ್ರದೇಶವನ್ನಾಗಿ ಘೋಷಿಸಬೇಕು ಎಂಬುದು ಲಡಾಖ್ ಜನರ ಪ್ರಮುಖ ಬೇಡಿಕೆಯಾಗಿದೆ.