ಲೋಕಸಭೆ ಚುನಾವಣೆ : ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಮತದಾನದ ವೇಳೆ ವಿಧ್ವಂಸಕ ಕೃತ್ಯ, ಗುಂಡಿನ ದಾಳಿ

Update: 2024-04-19 13:37 GMT

ಇಂಫಾಲ : ಈಶಾನ್ಯ ರಾಜ್ಯದಲ್ಲಿ ಬಿಗಿ ಭದ್ರತಾ ಕ್ರಮಗಳ ನಡುವೆ ಶುಕ್ರವಾರ ನಡೆದ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು thehindu ವರದಿ ಮಾಡಿದೆ.

ಮೊಯಿರಾಂಗ್ ವಿಧಾನಸಭಾ ವ್ಯಾಪ್ತಿಯಲ್ಲಿರುವ ಥಮನ್‌ಪೋಕ್ಪಿ ಎಂಬಲ್ಲಿನ ಮತದಾನ ಕೇಂದ್ರದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಥೋಂಗ್ಜು ವಿಧಾನಸಭಾ ವ್ಯಾಪ್ತಿಯ ಮತಗಟ್ಟೆಯೊಂದರಲ್ಲಿ ವಿಧ್ವಂಸಕ ಘಟನೆ ನಡೆದಿದೆ ಎನ್ನಲಾಗಿದೆ. ಮೊಯಿರಾಂಗ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳು ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದಲ್ಲಿವೆ.

ಮಣಿಪುರದ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಶುಕ್ರವಾರ ಸಂಪೂರ್ಣ ಮತದಾನ ನಡೆಯುತ್ತಿದೆ. ಔಟರ್ ಮಣಿಪುರ ಕ್ಷೇತ್ರದ ಕೆಲವು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗದ ಪ್ರಕಾರ ಸಂಜೆ 4 ಗಂಟೆಯ ಹೊತ್ತಿಗೆ ಮಣಿಪುರದಲ್ಲಿ 63% ಮತದಾನವಾಗಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ರಾಜ್ಯದಲ್ಲಿ ಅಂತಿಮ ಮತದಾನವು 82.69% ಆಗಿತ್ತು. ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದುಕೊಂಡಿತ್ತು ಮತ್ತು ನಾಗಾ ಪೀಪಲ್ಸ್ ಫ್ರಂಟ್ ಇನ್ನೊಂದು ಸ್ಥಾನವನ್ನು ಪಡೆದುಕೊಂಡಿತ್ತು.

ಮೇ ತಿಂಗಳಿನಿಂದ ಮಣಿಪುರದಲ್ಲಿ ಬುಡಕಟ್ಟು ಕುಕಿ ಮತ್ತು ಪ್ರಬಲ ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ವರದಿಯಾಗಿವೆ. ಫೆಬ್ರವರಿಯಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಹಿಂಸಾಚಾರದಲ್ಲಿ ಮೇ 3 ರಿಂದ 219 ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಜನರನ್ನು ಭದ್ರತೆಯ ದೃಷ್ಟಿಯಿಂದ ಸ್ಥಳಾಂತರಿಸಲಾಗಿದೆ.

ಮೈತೇಯಿ ಸಮುದಾಯದ ಸದಸ್ಯರು ರಾಜ್ಯದ ಜನಸಂಖ್ಯೆಯ 60% ರಷ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಇಂಫಾಲ್ ಕಣಿವೆಯಲ್ಲೇ ವಾಸ ಮಾಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News