"ಮೋದಿ ಜೊತೆಗಿನ ಸಂಬಂಧ ಉತ್ತಮವಾಗಿದೆ" : ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಸುಳಿವು ನೀಡಿದ ಟ್ರಂಪ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (File Photo: PTI)
ಹೊಸದಿಲ್ಲಿ: ನಾನು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತೇನೆ. ಪ್ರಧಾನಿ ಮೋದಿ ಮತ್ತು ನನ್ನ ನಡುವಿನ ಸಂಬಂಧ ಉತ್ತಮವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ ನಡೆದ 2025ರ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ(APEC) ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಯೋಜಿಸುತ್ತಿರುವುದಾಗಿ ಹೇಳಿದ್ದಾರೆ.
"ನಾನು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ ಮತ್ತು ಪ್ರಧಾನಿ ಮೋದಿ ಅವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮ್ಮ ನಡುವೆ ಉತ್ತಮ ಸಂಬಂಧವಿದೆ" ಎಂದು ಟ್ರಂಪ್ ಹೇಳಿದರು.
ಇದೇ ವೇಳೆ ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುವುದಾಗಿ ಟ್ರಂಪ್ ಹೇಳಿದರು. ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಿರುವುದಾಗಿ ಪುನರುಚ್ಛರಿಸಿದರು.