ಟ್ರಂಪ್-ಮೋದಿ ನಡುವೆ ಯಾವುದೇ ದೂರವಾಣಿ ಸಂಭಾಷಣೆ ನಡೆದಿಲ್ಲ: ರಷ್ಯಾದಿಂದ ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಅಮೆರಿಕ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ
Photo | indiatoday
ಹೊಸದಿಲ್ಲಿ : ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸಲಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸಿದೆ. ನಿನ್ನೆ ಇಬ್ಬರು ನಾಯಕರ ನಡುವೆ ದೂರವಾಣಿ ಮೂಲಕ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಗುರುವಾರ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯ, ಈ ಇಬ್ಬರು ನಾಯಕರ ನಡುವೆ ದೂರವಾಣಿ ಮೂಲಕ ಯಾವುದೇ ಸಂಭಾಷಣೆ ನಡೆದಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದೆ.
ಬುಧವಾರ ಶ್ವೇತಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ರಶ್ಯಾದಿಂದ ತೈಲ ಖರೀದಿ ಸ್ಥಗಿತಗೊಳಿಸುವುದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಉಕ್ರೇನ್ ವಿರುದ್ಧದ ರಶ್ಯಾ ಯುದ್ಧವನ್ನು ತಡೆಯುವ ಪ್ರಯತ್ನಕ್ಕೆ ಇದು ದೊಡ್ಡ ಹೆಜ್ಜೆ ಎಂದು ಟ್ರಂಪ್ ಬಣ್ಣಿಸಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯ ದೀರ್ಘಾವಧಿಯ ಅಧಿಕಾರಾವಧಿ ಮತ್ತು ನಾಯಕತ್ವವನ್ನು ಶ್ಲಾಘಿಸಿದ್ದಾರೆ.