ರಾಹುಲ್ ಗಾಂಧಿಯ ‘ಮತಗಳ್ಳತನ’ ಆರೋಪದ ಕುರಿತು ಎಸ್ಐಟಿ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಸುಪ್ರೀಂ ಕೋರ್ಟ್ (Photo: PTI)
ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹಾದೇವಪುರ ವಿಧಾನಸಭಾ ಕ್ಷೇತ್ರ ಮತ್ತಿತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪದ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಪಾಂಡೆ, “ಅತ್ಯಂತ ಸೂಕ್ಷ್ಮ ಮತ್ತು ನಕಲಿ ಮತದಾರರ ಬಗ್ಗೆ ವಿವರಿಸಿರುವ ಅರ್ಜಿಯನ್ನು ಒಂದು ವಾರದೊಳಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಆಗಸ್ಟ್ 7ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ಕುರಿತು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳನ್ನು ಆಧರಿಸಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನಕಲಿ ಮತದಾರರನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಮತದಾರರ ಪಟ್ಟಿಗಳ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟನೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಚುನಾವಣಾ ಆಯೋಗಕ್ಕೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅವರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.