×
Ad

ಗಾಝಾ ಶಾಂತಿ ಒಪ್ಪಂದ : ಟ್ರಂಪ್ ಮುಂದಾಳತ್ವವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Update: 2025-10-04 12:12 IST

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Photo: PTI)

ಹೊಸದಿಲ್ಲಿ : ಗಾಝಾ ಶಾಂತಿ ಒಪ್ಪಂದದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದಾಳತ್ವವನ್ನು ಸ್ವಾಗತಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಒತ್ತೆಯಾಳುಗಳ ಬಿಡುಗಡೆ ಮತ್ತು ಟ್ರಂಪ್ ಅವರ ಶಾಂತಿ ಯೋಜನೆಯ ಕೆಲವು ಪ್ರಸ್ತಾಪಗಳಿಗೆ ಹಮಾಸ್ ಒಪ್ಪಿಗೆ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗಾಝಾದಲ್ಲಿ ಶಾಂತಿ ಒಪ್ಪಂದಗಳು ನಿರ್ಣಾಯಕ ಪ್ರಗತಿ ಸಾಧಿಸುತ್ತಿರುವುದರಿಂದ ನಾವು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಮುಂದಾಳತ್ವವನ್ನು ಸ್ವಾಗತಿಸುತ್ತೇವೆ. ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ ನೀಡಿರುವುದು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದ ದೀರ್ಘಕಾಲೀನ ನಿಲುವನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಗಾಗಿ ನಡೆಸುವ ಎಲ್ಲಾ ಪ್ರಯತ್ನಗಳನ್ನು ಭಾರತವು ಬಲವಾಗಿ ಬೆಂಬಲಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.

ಗಾಝಾ ಯುದ್ಧ ಅಂತ್ಯಗೊಳಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಡಿಸಿದ 20 ಅಂಶಗಳ ಯೋಜನೆಗೆ ಹಮಾಸ್ ಪ್ರತಿಕ್ರಿಯೆಯನ್ನು ನೀಡಿದೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದ ಆಡಳಿತ ಹಸ್ತಾಂತರಿಸುವಂತಹ ಕೆಲವು ಅಂಶಗಳಿಗೆ ಒಪ್ಪಿಗೆ ಸೂಚಿಸಿದೆ. ಉಳಿದ ಪ್ರಮುಖ ಷರತ್ತುಗಳ ಕುರಿತು ಮಾತುಕತೆ ನಡೆಸಬೇಕಿದೆ ಎಂದು ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ತಕ್ಷಣವೇ ಗಾಝಾ ಮೇಳಿನ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸುವಂತೆ ಟ್ರಂಪ್‌ ಇಸ್ರೇಲ್‍ ಗೆ ಸೂಚನೆ ನೀಡಿದ್ದಾರೆ.

ಗಾಝಾದಲ್ಲಿ ಯುದ್ಧ ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯ ಮೊದಲ ಹಂತವನ್ನು ಜಾರಿಗೆ ತರಲು ಇಸ್ರೇಲ್ ಸಿದ್ಧತೆ ನಡೆಸುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News