×
Ad

ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದ ದಿನವೇ PoK ಭಾರತದ ಭಾಗವಾಗಲಿದೆ: ಕಾಂಗ್ರೆಸ್

Update: 2025-05-30 16:12 IST

 ಪ್ರಮೋದ್ ತಿವಾರಿ , ರಾಹುಲ್ ಗಾಂಧಿ | PTI 

ಹೊಸದಿಲ್ಲಿ: "ಲೋಕಸಭಾ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರಿಗೆ ಅಧಿಕಾರ ದೊರೆತ ದಿನದಂದೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ" ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಘೋಷಿಸಿದ್ದಾರೆ.  

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್ ತಿವಾರಿ, "ರಾಹುಲ್ ಗಾಂಧಿಗೆ ಅಧಿಕಾರ ಹಾಗೂ ಭಾರತದ ಪರವಾಗಿ ನಿರ್ಧಾರ ಕೈಗೊಳ್ಳುವ ಹಕ್ಕು ದೊರೆತ ದಿನವೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ಅವರು ದೃಢ ನಿಶ್ಚಯದ ವ್ಯಕ್ತಿಯಾಗಿರುವುದರಿಂದ , ನನ್ನಲ್ಲಿ ಆ ವಿಶ್ವಾಸವಿದೆ" ಎಂದು ಹೇಳಿದ್ದಾರೆ.

ಎಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ, 26 ಮಂದಿ ಪ್ರವಾಸಿಗರನ್ನು ಹತ್ಯೆಗೈದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಬಿಗಡಾಯಿಸಿದೆ.

ಭಯೋತ್ಪಾದಕರ ಈ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು ಮೇ 7ರಂದು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ಶಿಬಿರಗಳ ಮೇಲೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಿಗೇ, ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಗುಂಟ ಉಭಯ ಸೇನೆಗಳ ನಡುವೆ ಸಂಘರ್ಷ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ, "ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ಹಿಂಪಡೆಯಬೇಕು" ಕೂಗು ದೇಶಾದ್ಯಂತ ಬಲವಾಗಿ ಕೇಳಿ ಬರತೊಡಗಿದೆ. ಇದೇ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಇಂತಹ ಹೊತ್ತಿನಲ್ಲೇ, ಅಧಿಕಾರಕ್ಕೆ ಬಂದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯುವ ಕಾಂಗ್ರೆಸ್ ಪಕ್ಷದ ಘೋಷಣೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News