ಪುರಿ | ಪಟಾಕಿ ದಾಸ್ತಾನು ಸ್ಫೋಟ; ಮೃತಪಟ್ಟವರ ಸಂಖ್ಯೆ 11ಕ್ಕೇರಿಕೆ
ಸಾಂದರ್ಭಿಕ ಚಿತ್ರ
ಭುವನೇಶ್ವರ: ಒಡಿಶಾದ ಪುರಿಯಲ್ಲಿ ಪಟಾಕಿ ದಾಸ್ತಾನು ಸ್ಫೋಟಗೊಂಡು ಗಾಯಗೊಂಡವರ ಪೈಕಿ ಇಬ್ಬರು ರವಿವಾರ ಕೊನೆಯುಸಿರೆಳೆದಿದ್ದು, ದುರಂತದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ. ಪುರಿ, ಭುವನೇಶ್ವರ ಮತ್ತು ಕಟಕ್‌ನಲ್ಲಿಯ ವಿವಿಧ ಆಸ್ಪತ್ರೆಗಳಲ್ಲಿ 19 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.
ಮೇ 29ರಂದು ರಾತ್ರಿ ಪುರಿ ಶ್ರೀ ಜಗನ್ನಾಥ ದೇವರ ‘ಚಂದನ ಯಾತ್ರಾ’ ಸಂದರ್ಭದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಒಟ್ಟು 30 ಜನರು ಗಾಯಗೊಂಡಿದ್ದರು.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಮತ್ತು ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ ಪಾತ್ರಾ ಅವರು ಶನಿವಾರ ಸಂಜೆ ಮೃತರ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿರುವ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು,ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಪ್ರಕಟಿಸಿದ್ದಾರೆ.
ಪುರಿ ಪೋಲಿಸರು ಘಟನೆಯ ಬಗ್ಗೆ ಸ್ವಯಂಪ್ರೇರಿತ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.