ದಿಲ್ಲಿ ವಿಧಾನಸಭಾ ಚುನಾವಣೆ | ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ, ಹೋರಾಟ ಮುಂದುವರಿಯಲಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ | PC : PTI
ಹೊಸದಿಲ್ಲಿ: ದಿಲ್ಲಿ ಮತದಾರರಿಗೆ ಧನ್ಯವಾದ ಸಲ್ಲಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ ಎಂದು ಶನಿವಾರ ಹೇಳಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ದಿಲ್ಲಿಯ ಪ್ರಗತಿಗಾಗಿನ ಹೋರಾಟ ಹಾಗೂ ಮಾಲಿನ್ಯ, ಬೆಲೆಯೇರಿಕೆ ಮತ್ತು ಭ್ರಷ್ಟಾಚಾರ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.
“ನಾವು ದಿಲ್ಲಿ ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ಅರ್ಪಣಾ ಮನೋಭಾವ ಹಾಗೂ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲ ಮತದಾರರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
“ದಿಲ್ಲಿಯ ಪ್ರಗತಿ ಹಾಗೂ ದಿಲ್ಲಿಯ ನಾಗರಿಕರ ಹಕ್ಕುಗಳಿಗಾಗಿನ ಈ ಹೋರಾಟ, ಮಾಲಿನ್ಯ, ಬೆಲೆಯೇರಿಕೆ ಹಾಗೂ ಭ್ರಷ್ಟಾಚಾರ ವಿರುದ್ಧದ ಹೋರಾಟ ಮುಂದುವರಿಯಲಿದೆ” ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಶನಿವಾರ ಪ್ರಕಟಗೊಂಡ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮೂರನೆ ಅವಧಿಗೆ ಶೂನ್ಯ ಸಾಧನೆ ಮಾಡಿದ್ದು, 70 ಮಂದಿ ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಖಾತೆ ತೆರೆಯಲು ಮತ್ತೆ ವಿಫಲಗೊಂಡಿದೆ. ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸಿದ್ದಾರೆ.
ಇದಕ್ಕೂ ಮುನ್ನ, ಆಪ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, 2024ರ ಲೋಕಸಭಾ ಚುನಾವಣೆಯಲ್ಲೂ ಕೂಡಾ ಯಾವುದೇ ಸ್ಥಾನಗಳಲ್ಲಿ ಗೆಲುವು ಸಾಧಿಸಿರಲಿಲ್ಲ.