ಪ್ರವಾಹಪೀಡಿತ ರಾಜ್ಯಗಳಿಗೆ ತಕ್ಷಣವೇ ಪರಿಹಾರ ಪ್ಯಾಕೇಜ್ ಘೋಷಿಸಿ: ಕೇಂದ್ರಕ್ಕೆ ರಾಹುಲ್ ಗಾಂಧಿ ಆಗ್ರಹ
ರಾಹುಲ್ ಗಾಂಧಿ (Photo: PTI)
ಹೊಸದಿಲ್ಲಿ: ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸೇರಿದಂತೆ ಎಲ್ಲ ಪ್ರವಾಹಪೀಡಿತ ರಾಜ್ಯಗಳಿಗೆ ತಕ್ಷಣವೇ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಇದರೊಂದಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಬೇಕು ಎಂದೂ ಅವರು ಒತ್ತಿ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಮೋದಿಜೀ, ಪಂಜಾಬ್ ನಲ್ಲಿನ ಪ್ರವಾಹ ಅನಾಹುತಕಾರಿ ಹಾನಿಯನ್ನುಂಟು ಮಾಡಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿನ ಪ್ರವಾಹ ಪರಿಸ್ಥಿತಿಯೂ ತೀರಾ ಕಳವಳಕಾರಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
“ಇಂತಹ ಕಠಿಣ ಸಮಯದಲ್ಲಿ ನಿಮ್ಮ ಗಮನ ಹಾಗೂ ಕೇಂದ್ರ ಸರಕಾರದ ಸಕ್ರಿಯ ನೆರವು ತೀರಾ ಅಗತ್ಯವಾಗಿದೆ. ಸಾವಿರಾರು ಕುಟುಂಬಗಳು ತಮ್ಮ ಮನೆಗಳು ಹಾಗೂ ಪ್ರೀತಿಪಾತ್ರರನ್ನು ರಕ್ಷಿಸಿಕೊಳ್ಳಲು ಹೋರಾಟ ನಡೆಸುತ್ತಿವೆ” ಎಂದು ಅವರು ಗಮನ ಸೆಳೆದಿದ್ದಾರೆ.
ಈ ವಿಷಯದಲ್ಲಿ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿರುವ ರಾಹುಲ್ ಗಾಂಧಿ, “ಈ ರಾಜ್ಯಗಳಿಗೆ, ವಿಶೇಷವಾಗಿ ರೈತರಿಗೆ ತಕ್ಷಣವೇ ವಿಶೇಷ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಬೇಕು ಹಾಗೂ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.