"ನಾಟಕ ಕೊನೆಗೊಳಿಸಿ, ಅಂತ್ಯಕ್ರಿಯೆಗೆ ಅವಕಾಶ ನೀಡಿ": ಹರ್ಯಾಣ ಸಿಎಂ ಸೈನಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ
ರಾಹುಲ್ ಗಾಂಧಿ (Screengrab:X/ANI)
ಚಂಡೀಗಢ: ಹರ್ಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿರುವುದಕ್ಕಾಗಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.
2001ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ವೈ. ಪೂರಣ್ ಕುಮಾರ್ ಅವರು ಅಕ್ಟೋಬರ್ 7ರಂದು ಚಂದಿರದ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದರು.
ಮಂಗಳವಾರ ಮೃತ ಅಧಿಕಾರಿಯ ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ, “ಹರ್ಯಾಣ ಮುಖ್ಯಮಂತ್ರಿ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದರು. ಆದರೆ ಮೂರು ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ . ವೈ. ಪೂರಣ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ತಂದೆಯನ್ನು ಕಳೆದುಕೊಂಡು ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದಾರೆ,” ಎಂದು ಹೇಳಿದ್ದಾರೆ.
ಹರ್ಯಾಣ ಸರ್ಕಾರದ ವಿಳಂಬದ ಕ್ರಮವು ಕೋಟ್ಯಂತರ ದಲಿತರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಅವರು ಐಪಿಎಸ್ ಅಧಿಕಾರಿಯಾಗಿ ಸಮಾಜದ ಉನ್ನತ ಹುದ್ದೆ ತಲುಪಿದ ವ್ಯಕ್ತಿ. ಆದರೂ ಅವರಿಗೂ ನ್ಯಾಯ ದೊರೆಯದಿದ್ದರೆ, ಸಾಮಾನ್ಯ ದಲಿತರಿಗೆ ನ್ಯಾಯದ ಭರವಸೆ ಏನು? ಪ್ರಧಾನಿ ಮತ್ತು ಹರ್ಯಾಣದ ಮುಖ್ಯಮಂತ್ರಿಗಳೇ, ಕುಟುಂಬದ ಹೆಣ್ಣುಮಕ್ಕಳಿಗೆ ನೀಡಿದ ಬದ್ಧತೆಯನ್ನು ಈಡೇರಿಸಿ, ಅಂತ್ಯಕ್ರಿಯೆಗೆ ಅವಕಾಶ ನೀಡಿ ಮತ್ತು ಕುಟುಂಬದ ಮೇಲೆ ಒತ್ತಡ ಹೇರುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ,” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಬರೆದಿಟ್ಟಿರುವ ಡೆತ್ ನೋಟ್ ಆಧರಿಸಿ ದಾಖಲಿಸಲಾದ ಎಫ್‌ಐಆರ್‌ನ ತನಿಖೆಗಾಗಿ ಚಂಡೀಗಢ ಪೊಲೀಸರು ಆರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.
ಈ ನಡುವೆ, ಹರ್ಯಾಣ ಸರ್ಕಾರವು ಪೊಲೀಸ್ ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಿದ್ದು, ರೋಹ್ಟಕ್ ಎಸ್‌ಪಿ ನರೇಂದ್ರ ಬಿಜಾರ್ನಿಯಾ ಅವರನ್ನು ವರ್ಗಾವಣೆ ಮಾಡಿದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವೈ. ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.