×
Ad

ರಾಜ್ ಕೋಟ್: ಗೇಮಿಂಗ್ ಝೋನ್ ದುರಂತ; ಸಾವಿನ ಸಂಖ್ಯೆ 27ಕ್ಕೆ ಏರಿಕೆ

Update: 2024-05-26 10:58 IST

Photo: X/NDtv

ಗಾಂಧಿನಗರ: ಗುಜರಾತ್ ನ ರಾಜಕೋಟ್ ನಲ್ಲಿ ಶನಿವಾರ ಸಂಜೆ ಗೇಮಿಂಗ್ ಝೋನ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೇರಿದೆ. ಮೃತಪಟ್ಟವರಲ್ಲಿ ಒಂಬತ್ತು ಮಕ್ಕಳು ಸೇರಿದ್ದಾರೆ.

"ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತಿಸುವುದು ಕಷ್ಟಸಾಧ್ಯವಾಗಿದೆ" ಎಂದು ಸಹಾಯಕ ಪೊಲೀಸ್ ಆಯುಕ್ತ ವಿನಾಯಕ ಪಟೇಲ್ ಹೇಳಿದ್ದಾರೆ. ಗೇಮಿಂಗ್ ಝೋನ್ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.

"ಇಂದು ತೀರಾ ವಿಷಾದಕರ ಘಟನೆ ಸಂಭವಿಸಿದೆ. ರಾಜ್ಕೋಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಗೇಮಿಂಗ್ ಝೋನ್ನಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಮಕ್ಕಳು ಸೇರಿದಂತೆ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಸಾಧ್ಯವಾದಷ್ಟು ಮಂದಿಯನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ದುರಂತಕ್ಕೆ ಕಾರಣವಾದ ವ್ಯಕ್ತಿಗಳ ನಿರ್ಲಕ್ಷ್ಯದ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ" ಎಂದು ರಾಜಕೋಟ್ ಪಶ್ಚಿಮ ಕ್ಷೇತ್ರದ ಶಾಸಕರಾದ ದರ್ಶಿತಾ ಶಾ ಹೇಳಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಮಂದಿ ಗಣ್ಯರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ, ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಸಿಎಂ ಭೂಪೇಂದ್ರ ಪಟೇಲ್ ಸೂಚಿಸಿದ್ದಾರೆ.  

ಗೇಮಿಂಗ್ ಝೋನ್ ಮಾಲೀಕ ಯುವರಾಜ್ ಸಿಂಕ್ ಸೋಳಂಕಿ ಎಂಬಾತನನ್ನು ಬಂಧಿಸಲಾಗಿದ್ದು, ಆಕಸ್ಮಿಕದ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ರಾಜು ಭಾರ್ಗವ ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News